
ಹಾಸನ: ದ್ವಿಚಕ್ರ ವಾಹನ ಮತ್ತು ಸರ್ಕಾರಿ ಬಸ್ಸಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸಾವಿಗೀಡಾಗಿರುವ ಭೀಕರ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಯಡೆಗೌಡನಹಳ್ಳಿ ಬಳಿ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ತರುಣ್ (19), ರೇವಂತ್ (26) ಹಾಗೂ ಗಾಂಧಿನಗರ ಬಡಾವಣೆಯ ಇರ್ಫಾನ್ (20) ಎಂದು ಗುರುತಿಸಲಾಗಿದೆ. ಹಾಸನದಿಂದ ಮೈಸೂರು ಕಡೆಗೆ ಹೊರಟಿದ್ದ ಸಾರಿಗೆ ಬಸ್ ಮತ್ತು ಮೈಸೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿದೆ.
ಪರಿಣಾಮ ಸ್ಥಳದಲ್ಲಿಯೇ ಇರ್ಫಾನ್ ಸಾವಿಗೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರೇವಂತ್ ಹಾಗೂ ತರುಣ್ ಅವರನ್ನು ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಿ, ಮೃತಪಟ್ಟ ಇರ್ಫಾನ್ ಅನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದರು.
ಆಸ್ಪತ್ರೆಗೆ ದಾಖಲಾದ ಇಬ್ಬರೂ ಮೃತಪಟ್ಟ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಮೂವರ ಮೃತದೇಹಗಳನ್ನು ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ ಹಳ್ಳಿ ಮೈಸೂರು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Advertisement