
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಬೀದರ್ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಸ್ಥಳಗಳಿಗೆ ಮಂಗಳವಾರ ಭೇಟಿ ನೀಡಲಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾ ನಿಕ ಸಮೀಕ್ಷೆ ನಡೆಸಲಿದ್ದಾರೆ.
ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ ದಿಂದ ವಿಶೇಷ ವಿಮಾನದ ಮೂಲಕ ಹೊರಟು 11.40ರ ವೇಳೆಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ.
ಬಳಿಕ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ವಿಜ ಯಪುರ, ಯಾದಗಿರಿ, ಬೀದ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 2 ವೇಳೆಗೆ ಸಮೀಕ್ಷೆ ಪೂರ್ಣಗೊಳಿಸಿ ಕಲಬುರಗಿ ನಗರದ ಐವಾನ್-ಇ-ಷಾಹಿ ವಸತಿ ಗೃಹಕ್ಕೆ ಆಗಮಿಸಲಿದ್ದಾರೆ.
ಭೋಜನ ವಿರಾಮ ಬಳಿಕ ಮುಖ್ಯಮಂತ್ರಿ ಅವರು ಜಿಲ್ಲೆಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಲ್ಕೂ ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ನಂತರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಳೆ ಹಾನಿ ಪರಿಹಾರ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.
ನೆರೆ ಹಾನಿ ಸಮಸ್ಯೆಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದ್ದು, ಕೋರ್ ಕಮಿಟಿ ಸಭೆಯಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದೆ. ಈ ನಡುವಲ್ಲೇ ಮುಖ್ಯಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪರಿಷತ್ತಿನ ಎಲ್‌ಒಪಿ ಛಲವಾದಿ ನಾರಾಯಣಸ್ವಾಮಿ ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
Advertisement