

ಬೆಂಗಳೂರು: SSLC ಪರೀಕ್ಷೆಯಲ್ಲಿ ಮೂರನೇ ಭಾಷೆ ಹಿಂದಿಗೆ ಅಂಕ ನೀಡದೆ ಕೇವಲ ಗ್ರೇಡ್ ನೀಡುವ ನಿರ್ಧಾರದ ಬಗ್ಗೆ ಇರುವ ಕಳವಳಗಳನ್ನು ಸಮಗ್ರವಾಗಿ ಪರಿಶೀಲಿಸುವಂತೆ ರಾಜ್ಯಪಾಲರು ಕೋರಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರ ವಿಚಾರ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ.
ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಪತ್ರ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ. SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಗ್ರೇಡ್ ನೀಡಿದರೆ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆ ಮಾಡಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ ಸರ್ಕಾರದ ಈ ನಿರ್ಧಾರ ವಿದ್ಯಾರ್ಥಿಗಳು ಕಲಿಯುವ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು. ಶಿಕ್ಷಣದ ಮೇಲೆ ಬೀರುವ ಪರಿಣಾಮ ಬಗ್ಗೆ ಪೋಷಕರಿಗೂ ಆತಂಕ ಇದ್ದು, ರಾಜ್ಯಪಾಲರು ಈ ವಿಷಯವನ್ನು ಗಮನಿಸಿದ್ದಾರೆ.
ಹೀಗಾಗಿ ಶೈಕ್ಷಣಿಕ, ಆಡಳಿತಾತ್ಮಕ ಅಂಶ ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಸಂಬಂಧಿತ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಶೈಕ್ಷಣಿಕ ಉದ್ದೇಶಗಳಿಗೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಿಎಸ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿರುವ ನಡುವೆ ರಾಜ್ಯಪಾಲರ ಈ ಪತ್ರ ಹೆಚ್ಚು ಮಹತ್ವ ಪಡೆದಿದೆ.
ಸಮಸ್ಯೆಗಳನ್ನು ರಾಜ್ಯಪಾಲರು ಗಮನಿಸಿದ್ದಾರೆ ಮತ್ತು ಶಿಕ್ಷಣ ಕ್ಷೇತ್ರದಾದ್ಯಂತ ಅದರ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಷಯವನ್ನು ಸಮಗ್ರವಾಗಿ ಪರಿಶೀಲಿಸಬೇಕೆಂದು ಬಯಸುತ್ತಾರೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಈ ವಿಷಯವನ್ನು ಪರಿಶೀಲಿಸಲು ಮತ್ತು "ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಜ್ಯದ ಶೈಕ್ಷಣಿಕ ಉದ್ದೇಶಗಳಲ್ಲಿ ಸೂಕ್ತವೆಂದು ಪರಿಗಣಿಸಲಾದ ಕ್ರಮವನ್ನು ತೆಗೆದುಕೊಳ್ಳಲು ಮುಖ್ಯ ಕಾರ್ಯದರ್ಶಿಗೆ ತಿಳಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
Advertisement