

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಯಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ.
ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ.
ಸೋಮವಾರ (ಏ.13) ರಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ ಡೆಡ್‌ಲೈನ್ ನೀಡಿದ್ದರು. ಜೊತೆಗೆ ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದರು.
ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿದ್ದರಾಮಯ್ಯ ಅವರಿಗೆ ಸೂಚಿಸುವುದಾಗಿ ತಿಳಿಸಿದ್ದರು. ಇದರ ನಡುವೆ ಕೊನೆ ಗಳಿಗೆಯಲ್ಲಿ ನಜೀರ್ ಅಹಮ್ಮದ್ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ ಶಮನ ಆಗಿಲ್ಲ. ದಾವಣಗೆರೆಯಲ್ಲಿ ಅಭ್ಯರ್ಥಿ ವಿಚಾರವಾಗಿ ನಡೆದ ಬೆಳವಣಿಗೆಯಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಪತ್ರಿಕಾಗೋಷ್ಠಿಯನ್ನು ನಡೆಸಿದ್ದರು. ಸಮರ್ಥ್ ಅವರನ್ನು ಸೋಲಿಸಲು ವಿರೋಧ ಪಕ್ಷದ ಮುಖಂಡರ ಜೊತೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದರು.
ಈ ಗಂಭೀರ ಆರೋಪದ ಬೆನ್ನಲ್ಲೇ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಅಂಗೀಕಾರವಾಗಿದ್ದು, ಬಳಿಕ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜನೆ ಮಾಡಲಾಗಿದೆ.
ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರಿಗೂ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಕೊಡುವಂತೆ ಸೂಚಿಸಲಾಗಿತ್ತು.
ಪರಿಷತ್ ಸದಸ್ಯ ನಸೀರ್ ಅಹ್ಮದ್ ಅವರು ಸಿಎಂ ಸಿದ್ದರಾಮಯ್ಯ ಆಪ್ತ ವಲಯಲ್ಲಿ ಗುರುತಿಸಿಕೊಂಡವರು. ಅಲ್ಲದೆ, ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಆಪ್ತರು. ದಾವಣಗೆರೆ ದಕ್ಷಿಣದಲ್ಲಿ ಬಂಡಾಯ ಎದ್ದಾಗ ಅದನ್ನು ಶಮನ ಮಾಡುವ ಜವಾಬ್ದಾರಿಯನ್ನು ಆರಂಭದಲ್ಲಿ ನಸೀರ್ ಅಹ್ಮದ್ ಅವರಿಗೆ ನೀಡಲಾಗಿತ್ತು.
ಸಾದಿಕ್ ಪೈಲ್ವಾನ್ ಬಂಡಾಯ ತೀವ್ರಗೊಂಡಿದ್ದರೆ ಅದು ಪಕ್ಷಕ್ಕೆ ಹಿನ್ನಡೆ ಆಗುತ್ತಿತ್ತು. ಹಾಗಾಗಿ ನಸೀರ್ ಅಹ್ಮದ್ ಅವರಿಗೆ ಪೈಲ್ವಾನ್ ಮನವೊಲಿಸುವಂತೆ ಸೂಚಿಸಲಾಗಿತ್ತು. ಆರಂಭದಲ್ಲಿ ಅವರು ಒಪ್ಪಿಗೆ ಸೂಚಿಸಿ ದಾವಣಗೆರೆ ತೆರಳಲು ಮುಂದಾಗಿದ್ದರು. ಆದರೆ ಬಳಿಕ ಹಿಂದೇಟು ಹಾಕಿದರು ಎಂಬ ಮಾಹಿತಿ ಇದೆ. ಅಲ್ಲದೆ, ಪ್ರಚಾರದಲ್ಲೂ ತೊಡಗಿಸಿಕೊಳ್ಳದೆ ಅಂತರ ಕಾಯ್ದುಕೊಂಡರು ಎಂಬ ಮಾಹಿತಿಯೂ ಇದೆ. ಈ ಹಿನ್ನೆಲೆಯಲ್ಲಿ ನಸೀರ್ ಅಹ್ಮದ್ ಅವರ ತಲೆದಂಡಕ್ಕೆ ಸೂಚನೆ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
Advertisement