ಕುಡಿಯುವ ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!

ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದರು.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ವಿಧಾನಸೌಧ ಸಭಾಂಗಣದಲ್ಲಿ ಇಂದು ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ ಎಂದರು.

ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ: ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

114 ತಾಲೂಕುಗಳ 598 ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲೂಕುಗಳನ್ನು ಹಾಗೂ 2,410 ಗ್ರಾಮ ಪಂಚಾಯತ್ ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಟ್ಯಾಂಕರ್ಗಳ ಮೂಲಕ 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.

22 ಕೊಳವೆ ಬಾವಿಗಳು ಬಾಡಿಗೆಗೆ: ಪ್ರಸ್ತುತ 27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, 95 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರುತಿಸಲಾಗಿದೆ. ಒಟ್ಟು 145 ವಾರ್ಡ್ ಗಳಿಗೆ 57 ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆಗೆ 22 ಕೊಳವೆ ಬಾವಿಗಳನ್ನು ಪಡೆಯಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿ.ಎಂ.ಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿ.ಎಂ.ಸಿ ನೀರು ಲಭ್ಯವಿತ್ತು. ಪ್ರಸುತ ಕುಡಿಯುವ ನೀರಿಗೆ ಸಾಕಷ್ಟು ನೀರು ಜಲಾಶಯಗಳಲ್ಲಿ ಲಭ್ಯವಿದೆ. ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೂ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು. ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

CM Siddaramaiah
5,000 ಗ್ರಾಮಗಳಲ್ಲಿ ಕುಡಿಯುವ ನೀರು ಕಲುಷಿತ; ಗಬ್ಬೆದ್ದು ನಾರುತ್ತಿದೆ ಸಿಲಿಕಾನ್ ಸಿಟಿ; ಕುರ್ಚಿ ಕಚ್ಚಾಟ ಬಿಟ್ಟು ಮೂಲಭೂತ ಸಮಸ್ಯೆಗಳ ಪರಿಹರಿಸಿ..!

ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು: ಕುಡಿಯುವ ನೀರಿನ ಕುರಿತಾಗಿ ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ಇದಕ್ಕಾಗಿ ತಾಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು ಲ್ಲಾ ಆರ್. ಒ ಘಟಕಗಳು 24/7 ನಿರಂತರ ವಿದ್ಯುತ್ ಸರಬರಾಜಿನೊಂದಿಗೆ ಕಾರ್ಯ ನಿರ್ವಹಿಸುವುದನ್ನು ಖಾತ್ರಿಪಡಿಸಬೇಕು. ಆರ್ ಒ ಘಟಕಗಳ ತಕ್ಷಣದ ದುರಸ್ತಿ ಮತ್ತು ಕುಡಿಯುವ ನೀರಿನ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕು ಮಟ್ಟದಲ್ಲಿ ತಂಡಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ಮೇವಿನ ಕೊರತೆ ಸಧ್ಯಕ್ಕೆ ಇಲ್ಲ: ಕಳೆದ ಎರಡು ವರ್ಷಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಮೇವಿನ ಕೊರತೆ ಸಧ್ಯಕ್ಕೆ ಇರುವುದಿಲ್ಲ. ಆದರೆ ಈ ಕುರಿತು ನಿರ್ಲಕ್ಷ್ಯ ವಹಿಸದೆ ಮೇವಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು ಎಂದರು.

CM Siddaramaiah
ಮುಖ್ಯಮಂತ್ರಿಯಾಗಿ ಎರಡನೇ ಅವಧಿಯಲ್ಲಿ ಅಹಿಂದ ಬಗ್ಗೆ ಒಲವು ತೋರದ ಸಿದ್ದರಾಮಯ್ಯ: 'ಅಹಿಂದ' ಚಾಂಪಿಯನ್ 'ಕೈ' ಕಟ್ಟಿ ಹಾಕಿದ ಶಕ್ತಿ ಯಾವುದು?

ರಸಗೊಬ್ಬರ ಲಭ್ಯತೆ ಖಾತ್ರಿ: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ವ್ಯಾಪಾರಿಗಳು ರಸಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿ ದಾಸ್ತಾನು ಇರಿಸುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಲು ಕ್ರಮ ಕೈಗೊಳ್ಳಬೇಕು. ಯೂರಿಯಾ, ಡಿಎಪಿ ಸರಿಯಾಗಿ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ರಸಗೊಬ್ಬರ ಸಾಗಾಟ ಮಾಡುವುದನ್ನು ನಿಯಂತ್ರಿಸಬೇಕು. ಇದಕ್ಕಾಗಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com