

ಬೆಂಗಳೂರು: ಹಲವು ಗೊಂದಲಗಳ ನಡುವೆ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಹೇಳಿದ್ದಾರೆ.
ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಕೋರ್ಟ್ ಆದೇಶದಂತೆ ಈ ಬಾರಿ ಹಿಂದಿ ಭಾಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ವರ್ಷ ಹಿಂದಿಗೆ ಅಂಕ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ರಾಜ್ಯ ಸರ್ಕಾರ ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಅಂಕದ ಬದಲಿಗೆ ಗ್ರೇಡ್ ನೀಡಲು ತೀರ್ಮಾನಿಸಿತ್ತು. ಆದರೆ ಹೈಕೋರ್ಟ್ ಇದಕ್ಕೆ ತಡೆ ನೀಡಿದ್ದು, ಗ್ರೇಡ ಬದಲು ಅಂಕ ನೀಡುವಂತೆ ಆದೇಶಿಸಿದೆ.
Advertisement