

ಹುಬ್ಬಳ್ಳಿ: ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಏನೇ ಆಗಲಿ, ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸರ್ಕಾರ ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಹಲವು ನಾಯಕರಿಗೆ ಅವಕಾಶ ನೀಡುವ ದೃಷ್ಟಿಯಿಂದ ಸಂಪುಟ ಪುನಾರಚನೆ ಅಗತ್ಯವಿದೆ ಎಂದು ಹೇಳಿದರು. ಆದರೆ, ಈ ವಿಷಯದಲ್ಲಿ ಅಂತಿಮ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದೇ ಆಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ “ಏನಾಗಬೇಕೋ ಅದು ಆಗುತ್ತದೆ” ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಸರ್ಕಾರದೊಳಗೆ ಯಾವುದೇ ಗೊಂದಲವಿಲ್ಲ, ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದಾರೆ. ದೊಡ್ಡತನ ಪ್ರತಿಯೊಬ್ಬರ ಬಳಿ ಇರಬೇಕು ಎಂದು ಹೇಳಿದರು.
ಕೊರೋನಾ ಅವಧಿಯಲ್ಲಿ ಆರೋಗ್ಯ ಇಲಾಖೆಯ ಖರೀದಿಗಳಲ್ಲಿ ನಡೆದ ಅಕ್ರಮಗಳ ಬಗ್ಗೆ ಮಾತನಾಡಿದ ಅವರು, ಡಿ'ಕುನ್ಹಾ ಆಯೋಗದ ತನಿಖೆಯಲ್ಲಿ ದೊಡ್ಡ ಪ್ರಮಾಣದ ಹಣ ದುರುಪಯೋಗವಾಗಿದೆ ಎಂದು ತಿಳಿಸಿದರು.
ಇದೇ ವೇಳೆ, 225 ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಕ್ ಔಷಧ ಅಂಗಡಿಗಳನ್ನು ನಿಷೇಧಿಸುವ ನಿರ್ಧಾರ ಕುರಿತು ಮಾತನಾಡಿ, ಸರ್ಕಾರದ ಉದ್ದೇಶ ಸರ್ಕಾರದಿಂದ ಒದಗಿಸುವ ಔಷಧಗಳನ್ನು ಮಾತ್ರ ಲಭ್ಯವಾಗುವಂತೆ ಮಾಡುವುದು ಎಂದರು. ಆದರೆ, ಇದನ್ನು ಪ್ರಶ್ನಿಸಿ ಕೆಲವರು ಕೋರ್ಟ್‌ಗೆ ಹೋಗಿದ್ದಾರೆ ಎಂದು ತಿಳಿಸಿದರು.
ಇನ್ನೊಂದೆಡೆ, ರಾಜ್ಯದ ಕೆಲ ಭಾಗಗಳಲ್ಲಿ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದರು.
Advertisement