

ಬೆಂಗಳೂರು: ಶಾಲೆಗಳು ಮತ್ತು ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಸುತ್ತೋಲೆಯಲ್ಲಿ, “ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಜೊತೆಗೆ ಶಿಸ್ತಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಹಾಗೂ ಶಿಕ್ಷಣ ಸಂಸ್ಥೆಗಳ ಗೌರವಕ್ಕೂ ಧಕ್ಕೆ ಉಂಟಾಗುತ್ತದೆ,” ಎಂದು ತಿಳಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ತಡೆಯಲು ಜಾಗೃತಿ ಮೂಡಿಸುವಂತೆ ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದೆ.
ಯಾವುದೇ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಇಂತಹ ಹಾಡುಗಳಿಗೆ ನೃತ್ಯ ಮಾಡಲು ಪ್ರೇರೇಪಿಸಿದರೆ, ಆ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಪರ್ಯಾಯವಾಗಿ, ಪ್ರೇರಣಾದಾಯಕ, ದೇಶಭಕ್ತಿ, ನೈತಿಕ ಮೌಲ್ಯಗಳು, ಗೌರವ ಮತ್ತು ಸಹೋದರತ್ವವನ್ನು ಉತ್ತೇಜಿಸುವ ಹಾಡುಗಳನ್ನು ಶಿಕ್ಷಕರು ಆಯ್ಕೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.
Advertisement