

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಮಕೃಷ್ಣ ಆಶ್ರಮದಲ್ಲಿ ವಿವೇಕಾ ಸ್ಮಾರಕ(ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ)ವನ್ನು ಉದ್ಘಾಟಿಸಿದರು. ಬಳಿಕ ಆಶ್ರಮದಲ್ಲೇ ಕೆಲಹೊತ್ತು ಧ್ಯಾನ ಮಾಡಿದರು.
ಸುಮಾರು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದ ಆವರಣದಲ್ಲಿ ಗಿಡವೊಂದನ್ನು ನೆಟ್ಟರು
ಮಂಡಕಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ನೆಲೆಸಿದ್ದರು ಎನ್ನುವ ನೆನಪಿಗಾಗಿ ಹಾಗೂ ಯುವ ಜನರಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸಾಂಸ್ಕೃತಿಕ ಯುವ ಕೇಂದ್ರವನ್ನ ನಿರ್ಮಿಸಲಾಗಿದೆ.