

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಮೂಲಕ ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ಮಹಿಳೆಯರ ಆರೋಗ್ಯ ಕಾಳಜಿಗೆ ಒತ್ತು ನೀಡುವ ಉದ್ದೇಶದಿಂದ ಸರ್ಕಾರ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಋತುತಾರೆ ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟಿ ರಮ್ಯಾ ಅವರನ್ನು ನೇಮಕ ಮಾಡಲಾಗಿದೆ. ಮಹಿಳೆಯರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗಿದೆ.
ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ನಟಿ ರಮ್ಯಾ ಜಂಟಿ ಸುದ್ದಿಗೋಷ್ಠಿ ನಡೆಸಿ ಯೋಜನೆ ಕುರಿತು ಮಾಹಿತಿ ನೀಡಿದರು. ಮಹಿಳೆಯರ ಆರೋಗ್ಯ ಸಂಬಂಧಿತ ಸಮಸ್ಯೆಗಳ ಅಧ್ಯಯನ ಮತ್ತು ಪರಿಹಾರ ಕ್ರಮಗಳಿಗಾಗಿ ಮಹಿಳಾ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಸಚಿವ ಯು.ಟಿ ಖಾದರ್ ತಿಳಿಸಿದರು.
ನಂತರ ಮಾತನಾಡಿದ ರಮ್ಯಾ, ಮೆನೋಪಾಸ್ ಸಮಸ್ಯೆ ಮಹಿಳೆಯರನ್ನು ಹೆಚ್ಚಾಗಿ ಕಾಡುತ್ತದೆ ಎಂದರು. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಮೆನೋಪಾಸ್ ಬೇಗ ಕಾಣಿಸಿಕೊಳ್ಳುತ್ತದೆ. ಸಿಟಿಯಲ್ಲಿ ಅತಿ ಹೆಚ್ಚಿನ ಮಹಿಳೆಯರು ಮೆನೋಪಾಸ್ ಸಮಯದಲ್ಲಿ ಸಮಸ್ಯೆಯಿಂದ ಬಳಲುತ್ತಾರೆ. ಇದನ್ನು ಸಮರ್ಥವಾಗಿ ನಿಭಾಯಿಸಬೇಕು. ನಮ್ಮ ಮನವಿದೆ ಸ್ಪಂಧಿಸಿ ರಾಜ್ಯ ಸರ್ಕಾರ ಯೋಜನೆ ಜಾರಿಗೆ ತಂದಿದ್ದು ನನ್ನನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡಿರುವುದು ಖುಷಿ ಇದೆ ಎಂದರು.