

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ವತಿಯಿಂದ ಆಗಸ್ಟ್ 9, 10 ಮತ್ತು 11 ರಂದು ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ 38 ಕಿ.ಮೀ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ಬೈರಮಂಗಲದಿಂದ ಫ್ರೀಡಂ ಪಾರ್ಕ್‌ವರೆಗೆ ರೈತರ ಜೊತೆ ಪಾದಯಾತ್ರೆ ಮಾಡುತ್ತೇವೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ರೈತರು ಸಂಪೂರ್ಣವಾಗಿ ಈ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಈ ಸರ್ಕಾರಕ್ಕೆ ಕಣ್ಣು ಕಾಣುತ್ತಿಲ್ಲ, ಕಿವಿಯೂ ಕೇಳುತ್ತಿಲ್ಲ. ರೈತರ ವಿರುದ್ಧ ಸರ್ಕಾರದ ನಡೆ ಇದೆ. ಹಾಗಾಗಿ ನಾವು ರೈತರ ಪರ ನಿಲ್ಲುವ ಕೆಲಸ ಮಾಡುತ್ತಿದ್ದೇವೆ ಎಂದು ನಿಖಿಲ್ ತಿಳಿಸಿದರು.
ಕಳೆದ ಜುಲೈ 30, 31 ಮತ್ತು ಆಗಸ್ಟ್ 1 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ ಅಜ್ಜಿ ಚೆನ್ನಮ್ಮ ಅವರ ಅಗಲಿಕೆ ದುಃಖದ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಮುಂದೂಡಲಾಗಿತ್ತು, ಆದರೆ ಈಗ ಆಗಸ್ಟ್ 9 ರಿಂದ 11 ರವರೆಗೆ 3 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ಹೇಳಿದರು.