Ganesh festival: ಪಿಒಪಿಗೆ ಗೇಟ್ ಪಾಸ್, ಮಣ್ಣಿನ ಗಣೇಶನಿಗಷ್ಟೇ ಅವಕಾಶ, ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಖಡಕ್ ಸೂಚನೆ!

ಪಿಒಪಿ ಮೂರ್ತಿಗಳನ್ನು ಕ್ಯಾಲ್ಸಿಯಂ ಸಲ್ಫೇಟ್ ಹೆಮಿಹೈಡ್ರೇಟ್ ಪುಡಿಯಿಂದ ತಯಾರಿಸಲಾಗುತ್ತದೆ. ಇದರಲ್ಲಿ ಸಲ್ಫರ್, ಬಣ್ಣದ್ರವ್ಯಗಳು, ಜಿಪ್ಸಮ್ ಮತ್ತು ಮೆಗ್ನೀಷಿಯಂನಂತಹ ವಸ್ತುಗಳು ಇರುತ್ತವೆ..
eco-friendly clay Ganesh idols
ಮಣ್ಣಿನ ಗಣೇಶ ಮೂರ್ತಿಗಳು
Updated on

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಗಣೇಶ ಹಬ್ಬ ಹತ್ತಿರವಾಗುತ್ತಿರುವಂತೆಯೇ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮಣ್ಣಿನ ಗಣೇಶ ಮೂರ್ತಿಗಳಿಗಷ್ಟೇ ಅವಕಾಶ ನೀಡುವ ಕುರಿತು ಖಡಕ್ ಆದೇಶ ಹೊರಡಿಸಿದೆ.

ಹೌದು.. ಕರ್ನಾಟಕದಲ್ಲಿ ಗಣೇಶೋತ್ಸವದ ವೇಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ಪರಿಸರ ಸ್ನೇಹಿ, ಬಣ್ಣ ಹಚ್ಚದ ಮಣ್ಣಿನ ಗಣೇಶ ಮೂರ್ತಿಗಳಿಗೆ ಮಾತ್ರ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಸೆಪ್ಟೆಂಬರ್ 14ರಂದು ಗಣೇಶ ಹಬ್ಬ ನಡೆಯಲಿರುವ ಹಿನ್ನೆಲೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದು, ಇಲಾಖೆಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ರಾಸಾಯನಿಕ ಬಣ್ಣ ಬಳಿದಿರುವ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳ ವಿಸರ್ಜನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಜಲಮೂಲಗಳು ಹಾಗೂ ಪರಿಸರ ಸಂರಕ್ಷಣೆಗಾಗಿ ಜನರು ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಉತ್ತೇಜಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗೌರಿ ಮತ್ತು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಮಾತ್ರ ಅವಕಾಶ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಸೂಚಿಸಿದ್ದಾರೆ.

eco-friendly clay Ganesh idols
ಕರ್ನಾಟಕ ಹೆದ್ದಾರಿಗಳಲ್ಲಿ EV charging ಕೊರತೆ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೇವಲ 4 ಕೇಂದ್ರಗಳಲ್ಲಷ್ಟೇ ಸೌಲಭ್ಯ..!

ಪಿಒಪಿ ಮೂರ್ತಿಗಳಿಗಿಲ್ಲ ಅವಕಾಶ

ಹಬ್ಬಕ್ಕೂ ಮುನ್ನವೇ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಣೆ ಹಾಗೂ ಮಾರಾಟವನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಖಂಡ್ರೆ ನಿರ್ದೇಶನ ನೀಡಿದ್ದಾರೆ. ಹಬ್ಬದ ಸಂದರ್ಭದಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆದು, ಪಂಚಾಯಿತಿ ಮಟ್ಟದಲ್ಲಿ ಪಿಒಪಿ ಮೂರ್ತಿಗಳಿಂದಾಗುವ ಹಾನಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುವಂತೆಯೂ ಅವರು ಸೂಚಿಸಿದ್ದಾರೆ.

ಪರಿಸರದ ಮೇಲೆ ಗಂಭೀರ ಪರಿಣಾಮ

ಪಿಒಪಿ ಮೂರ್ತಿಗಳನ್ನು ಕ್ಯಾಲ್ಸಿಯಂ ಸಲ್ಫೇಟ್ ಹೆಮಿಹೈಡ್ರೇಟ್ ಪುಡಿಯಿಂದ ತಯಾರಿಸಲಾಗುತ್ತದೆ. ಇದರಲ್ಲಿ ಸಲ್ಫರ್, ಬಣ್ಣದ್ರವ್ಯಗಳು, ಜಿಪ್ಸಮ್ ಮತ್ತು ಮೆಗ್ನೀಷಿಯಂನಂತಹ ವಸ್ತುಗಳು ಇರುತ್ತವೆ ಎಂದು ಖಂಡ್ರೆ ತಿಳಿಸಿದ್ದಾರೆ.

ಈ ಮೂರ್ತಿಗಳಿಗೆ ಬಳಸುವ ಬಣ್ಣಗಳಲ್ಲಿ ಪಾದರಸ, ಕ್ಯಾಡ್ಮಿಯಂ ಹಾಗೂ ಸೀಸದಂತಹ ಅಪಾಯಕಾರಿ ಭಾರ ಲೋಹಗಳು ಇರುವ ಸಾಧ್ಯತೆಯಿದ್ದು, ಅವು ಪರಿಸರಕ್ಕೆ ಹಾನಿಕಾರಕವಾಗಿವೆ ಎಂದು ಅವರು ಹೇಳಿದ್ದಾರೆ.

ಕೆರೆ, ನದಿ, ಬಾವಿ ಸೇರಿದಂತೆ ಇತರ ಜಲಮೂಲಗಳಲ್ಲಿ ಪಿಒಪಿ ಮೂರ್ತಿಗಳನ್ನು ವಿಸರ್ಜಿಸಿದಾಗ ಈ ಭಾರ ಲೋಹಗಳು ನೀರಿಗೆ ಸೇರುತ್ತವೆ. ಇದರಿಂದ ಮಾನವರು ಮತ್ತು ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟಾಗುವುದರ ಜೊತೆಗೆ ಜಲಚರಗಳಿಗೂ ಹಾನಿಯಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

eco-friendly clay Ganesh idols
Watch | ಕರ್ನಾಟಕದಲ್ಲಿ SIR 99.96% ಪೂರ್ಣ; 1.11 ಕೋಟಿ ಮತದಾರರ ಕಥೆ ಏನು?

ನಿಯಮ ಉಲ್ಲಂಘನೆಗೆ ಕಠಿಣ ಕ್ರಮ

1974ರ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆಯ ಸೆಕ್ಷನ್ 33ಎ ಅನ್ನು ಉಲ್ಲೇಖಿಸಿದ ಖಂಡ್ರೆ, ರಾಜ್ಯದ ನದಿಗಳು, ಕೆರೆಗಳು, ಕೊಳಗಳು, ಜಲಾಶಯಗಳು, ಬಾವಿಗಳು ಹಾಗೂ ಇತರ ಜಲಮೂಲಗಳಲ್ಲಿ ಪಿಒಪಿ ಮೂರ್ತಿಗಳ ವಿಸರ್ಜನೆಯನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

2023ರ ಸೆಪ್ಟೆಂಬರ್ 15ರಂದು ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ಪರಿಸರಕ್ಕೆ ಹಾನಿಕಾರಕವಾದ ಪಿಒಪಿ ಮೂರ್ತಿಗಳ ತಯಾರಿಕೆ, ಸಾಗಣೆ, ಮಾರಾಟ ಹಾಗೂ ವಿಸರ್ಜನೆಯನ್ನು ನಿಷೇಧಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಕೂಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದು ಅವರು ಹೇಳಿದ್ದಾರೆ.

ಆದ್ದರಿಂದ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜಲಮೂಲಗಳು ಮತ್ತು ಪರಿಸರವನ್ನು ರಕ್ಷಿಸಲು ಎಲ್ಲ ಗ್ರಾಮ ಪಂಚಾಯಿತಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ ಖಂಡ್ರೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com