ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ: CM ಡಿ ಕೆ ಶಿವಕುಮಾರ್

ಕೃಷಿ ಪದವಿ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗಳಿಗೆ ಅರ್ಹತೆ ನೀಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಆದರೆ ಮರುನಿಗದಿಯಾಗುವ ಪರೀಕ್ಷೆಯಲ್ಲಿ ಬಿಇ ಮತ್ತು ಬಿಟೆಕ್ ಅಭ್ಯರ್ಥಿಗಳನ್ನು ಹೊರಗಿಡಲಾಗುತ್ತದೆಯೇ ಎಂಬ ಬಗ್ಗೆ ಮುಖ್ಯಮಂತ್ರಿ ಯಾವುದೇ ಸ್ಪಷ್ಟನೆ ನೀಡಿಲ್ಲ.
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ: CM ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಆಗಸ್ಟ್‌ 8 ಮತ್ತು 9ರಂದು ನಡೆಯಬೇಕಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಹುದ್ದೆಗಳಿಗೆ ಬಿಇ (BE) ಹಾಗೂ ಬಿಟೆಕ್ (BTech) ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಕೆಇಎ ನಿರ್ಧಾರವನ್ನು ವಿರೋಧಿಸಿ ಕೃಷಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕೃಷಿ ಪದವಿ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗಳಿಗೆ ಅರ್ಹತೆ ನೀಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಆದರೆ ಮರುನಿಗದಿಯಾಗುವ ಪರೀಕ್ಷೆಯಲ್ಲಿ ಬಿಇ ಮತ್ತು ಬಿಟೆಕ್ ಅಭ್ಯರ್ಥಿಗಳನ್ನು ಹೊರಗಿಡಲಾಗುತ್ತದೆಯೇ ಎಂಬ ಬಗ್ಗೆ ಮುಖ್ಯಮಂತ್ರಿ ಯಾವುದೇ ಸ್ಪಷ್ಟನೆ ನೀಡಿಲ್ಲ.

ಪ್ರತಿಭಟನೆ ನಡೆಸುತ್ತಿದ್ದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK) ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆಗಸ್ಟ್‌ 4ರಂದು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿದ ಮುಖ್ಯಮಂತ್ರಿಗಳು, "ಆಗಸ್ಟ್‌ 4ರಂದು ವಿದ್ಯಾರ್ಥಿಗಳು ನನ್ನನ್ನು ಭೇಟಿ ಮಾಡಿ ತಮ್ಮ ಆತಂಕವನ್ನು ಹಂಚಿಕೊಂಡಾಗ, ಅವರ ಅನಿಶ್ಚಿತತೆ ಮತ್ತು ಕಳವಳವನ್ನು ಅರ್ಥಮಾಡಿಕೊಂಡೆ. ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಸೂಕ್ಷ್ಮವಾಗಿ ಮತ್ತು ನ್ಯಾಯಯುತವಾಗಿ ಪರಿಗಣಿಸುವ ಭರವಸೆ ನೀಡಿದ್ದೆ. ಕೃಷಿ ಪದವೀಧರರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಿದ್ದೇವೆ," ಎಂದು ತಿಳಿಸಿದ್ದಾರೆ.

ಇದೇ ವೇಳೆ, ಐಟಿ/ಬಿಟಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.

ತೋಟಗಾರಿಕೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ತೋಟಗಾರಿಕೆ ನಿರ್ದೇಶಕ ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್‌ 30 ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಸಲು ಆಗಸ್ಟ್‌ 31 ಅಂತಿಮ ದಿನವಾಗಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರ ಪ್ರಕಾರ, ಸಹಾಯಕ ತೋಟಗಾರಿಕೆ ನಿರ್ದೇಶಕರ 5 ಹುದ್ದೆಗಳು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿಗಳ 75 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com