

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಮೃತಪಟ್ಟ ಭೀಕರ ದುರಂತ ಮಂಗಳವಾರ ಸಂಭವಿಸಿದೆ.
ಡಾ. ರಾಜ್‌ಕುಮಾರ್ ಪುಣ್ಯಭೂಮಿ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್‌ಪಾಸ್‌ನಲ್ಲಿ ಭಾರಿ ಪ್ರಮಾಣದ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನಿರ್ಮಿಸುತ್ತಿರುವ ಅಂಡರ್‌ಪಾಸ್‌ನಲ್ಲಿ ಸುಮಾರು 20 ಅಡಿ ಆಳದ ಗುಂಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮಣ್ಣಿನ ತಡೆಗೋಡೆ (ಮಡ್ ವಾಲ್) ಕುಸಿದುಬಿದ್ದ ಪರಿಣಾಮ, ಮಣ್ಣಿನಡಿ ಸಿಲುಕಿ ಇಬ್ಬರು ಹೊರರಾಜ್ಯದ ಕಾರ್ಮಿಕರು ದುರಂತ ಅಂತ್ಯ ಕಂಡಿದ್ದಾರೆ.
ಇಂದು ಬೆಳಗ್ಗೆ 11 ಗಂಟೆ ಸುನಾರಿಗೆ ಈ ದುರಂತ ಸಂಭವಿಸಿದ್ದು, ಗುಂಡಿಯಲ್ಲಿ ಸಂಗ್ರಹವಾಗಿದ್ದ ನೀರನ್ನು ಮೋಟಾರ್ ಬಳಸಿ ಪಂಪ್ ಮಾಡುತ್ತಿದ್ದಾಗ, ಒಂದು ಬದಿಯಲ್ಲಿನ ಮಣ್ಣು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಾಯವನ್ನು ಅರಿತ ಮೂವರು ಕಾರ್ಮಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಇತರ ಇಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿ, ಮೃತಪಟ್ಟಿದ್ದಾರೆ.
ಮೃತರನ್ನು ಒಡಿಶಾ ಮೂಲದ ಸೋನಾರಾಮ್ (26) ಹಾಗೂ ಜಾರ್ಖಂಡ್ ಮೂಲದ ಪರಿಮಳ್(31) ಎಂದು ಗುರುತಿಸಲಾಗಿದ್ದು, ಇಬ್ಬರೂ ಮಣ್ಣಿನಡಿಯಲ್ಲಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಗಾಯಗೊಂಡ ಸದಾನಂದ್, ಸುನೀಲ್ ಹಾಗೂ ಇರ್ಮಿಯಾಜ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮತ್ತು ಗಾಯಾಳುಗಳು ಒಡಿಶಾ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ಮೂಲದವರೆಂದು ಪೊಲೀಸರು ತಿಳಿಸಿದ್ದಾರೆ.
ಮಣ್ಣು ಕುಸಿತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ನಂದಿನಿ ಲೇಔಟ್ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.
ನಿರ್ಮಾಣ ಸ್ಥಳದಲ್ಲಿ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.