

ಬೆಂಗಳೂರು: ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೋರ್ಟ್ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಪ್ರದೀಪ್ ಈಶ್ವರ್ ವಿರುದ್ಧ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇಂದು ಬಂಧನ ವಾರಂಟ್ ಜಾರಿ ಮಾಡಿದೆ. ಕೋರ್ಟ್ ವಿಚಾರಣೆಗೆ ಪ್ರದೀಪ್ ಈಶ್ವರ್ ಗೈರಾದ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ಜಾರಿ ಮಾಡಿದೆ.
2024ರ ಜನವರಿ 1ರಂದು ಪ್ರತಾಪ್ ಸಿಂಹ ವಿರುದ್ಧ ಪ್ರದೀಪ್ ಈಶ್ವರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಕೇಸ್ ದಾಖಲಿಸಿದ್ದರು. ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಪ್ರದೀಪ್ ಈಶ್ವರ್ ಗೆ ಸೂಚಿಸಿತ್ತು.