

ಶಿವಮೊಗ್ಗ: ಆರ್‌ಎಂಎಲ್ ನಗರದಲ್ಲಿ ಈದ್ ಮಿಲಾದ್ ಆಚರಣೆಗೆ ನಿರ್ಮಿಸಲಾಗುತ್ತಿದ್ದ ಕಟೌಟ್ ಮೇಲೆ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಆರೋಪದ ಮೇರೆಗೆ ಶಿವಮೊಗ್ಗ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಎಫ್‌ಐಆರ್ ಪ್ರಕಾರ, ನಿಹಾಲ್ ಅಲಿಯಾಸ್ ಬೆಕ್ಕು, ಉಮರ್ ಹಾಗೂ ಅಬ್ರಹಾರ್ ಅವರು ಕಟೌಟ್ ಮೇಲೇರಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿ, ಕೃತ್ಯವನ್ನು ವಿಡಿಯೊ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ. ಬಳಿಕ ಈ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯವು ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಸೃಷ್ಟಿಸುವ, ಪರಸ್ಪರ ದ್ವೇಷಕ್ಕೆ ಪ್ರಚೋದನೆ ನೀಡುವ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಸಾಧ್ಯತೆ ಹೊಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 353(2), 196(1) ಹಾಗೂ 197ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.