

ಹಂಪಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಸುಮಾರು 60 ಸಾವಿರ ರೂ.ಗಳ ಆರ್ಥಿಕ ಬಲವನ್ನು ತುಂಬುತ್ತಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.
ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಆಯೋಜಿಸಿದ್ದ ಐತಿಹಾಸಿಕ ಹಂಪಿ ಉತ್ಸವ - 2026ಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರ ಅನೇಕ ಭಾಗ್ಯ ಯೋಜನೆಗಳನ್ನು ನೀಡಿದ್ದು, 2023 ರಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಿದೆ. ಇವು ಅಸಮಾನತೆಯನ್ನು ನಿವಾರಿಸುವ ಉದ್ದೇಶ ಹೊಂದಿದ ಯೋಜನೆಗಳು ಎಂದರು.
ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತರಾಗಿಸಲು ಸಾಧ್ಯವಾಗದೇ ಇದ್ದರೆ, ಜಾತಿ ವ್ಯವಸ್ಥೇ ಹೋಗಲಾಡಿಸಲು ಅಸಾಧ್ಯ ಎಂದು ಹೇಳಿದರು.
ರಾಜ್ಯ ಸರ್ಕಾರ ಹಂಪಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿದೆ. ಈ ರೀತಿಯ ಅದ್ಧೂರಿ ಹಂಪಿ ಉತ್ಸವದ ಆಚರಣೆಗೆ ಮೂಲಕಾರಣ ಎಂ ಪಿ ಪ್ರಕಾಶ್ ಅವರು. ಅವರೊಬ್ಬ ಅಪರೂಪದ ವ್ಯಕ್ತಿ ಎಂದು ಬಣ್ಣಿಸಿದ ಮುಖ್ಯಮಂತ್ರಿ, ಇನ್ನುಮುಂದೆ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.
ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ನಾಡು ಸಂಪತ್ಭರಿತವಾಗಿತ್ತು. ನಮ್ಮ ಸರ್ಕಾರ ಕೂಡ ಸಾಹಿತ್ಯ, ಸಂಸ್ಕೃತಿ, ಕಲೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ವಿಜಯನಗರ ಕಾಲದಲ್ಲಿ ಸಂಪ್ಭರಿತವಾದ ಹಂಪಿಯ ಹಿರಿಮೆಯನ್ನು ಹಂಪಿ ಉತ್ಸವದಿಂದ ತಿಳಿಯಬಹುದಾಗಿದೆ. ವಿದೇಶಿ ಪ್ರವಾಸಿಗ ಅಬ್ದುಲ್ ರಜಾಕ್‌ರು ವಿಜಯನಗರ ಶ್ರೀಮಂತವಾದ ಸ್ಥಳವಾಗಿತ್ತು ಎಂದು ಉಲ್ಲೇಖಿಸಿದ್ದರು.
Advertisement