

ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಹಲವು ಮೂಲಸೌಕರ್ಯ ಮತ್ತು ನಗರಾಭಿವೃದ್ಧಿ ಯೋಜನೆಗಳನ್ನು ಘೋಷಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಈ ಉಪಕ್ರಮಗಳು ನಗರದ ಭವಿಷ್ಯವನ್ನು ರೂಪಿಸುತ್ತವೆ ಎಂದು ಗುರುವಾರ ಹೇಳಿದರು.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬೆಂಗಳೂರಿನ ಬೆಳವಣಿಗೆ ಮತ್ತು ಸಂಚಾರ ಸವಾಲುಗಳನ್ನು ಪರಿಹರಿಸುವ ವಿಶಾಲ ದೃಷ್ಟಿಕೋನದ ಭಾಗವಾಗಿ ಭೂ-ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ ರಾಜ್ಯ ಸರ್ಕಾರವು ದೀರ್ಘಕಾಲದಿಂದ ಬಾಕಿ ಇರುವ ರಸ್ತೆ, ಸುರಂಗ, ಫ್ಲೈಓವರ್ ಹಾಗೂ ಟೌನ್‌ಶಿಪ್ ಯೋಜನೆಗಳನ್ನು ಮುಂದುವರಿಸುತ್ತಿದೆ ಎಂದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಈ ವರ್ಷ ಐವತ್ತನೇ ವಸಂತಕ್ಕೆ ಕಾಲಿಟ್ಟಿದ್ದು, ಬಿಡಿಎ ಮಿತಿಯಲ್ಲಿ, ರಾಜ್ಯ ಸರ್ಕಾರವು ಯೋಜಿಸಿರುವ ವಿವಿಧ ಯೋಜನೆಗಳು ಇತಿಹಾಸದ ಪುಸ್ತಕಗಳಲ್ಲಿ ಸ್ಥಾನ ಪಡೆಯುತ್ತವೆ ಎಂದರು.
ಬಿಡಿಎ ನನ್ನ ರಾಜಕೀಯ ಜೀವನದಲ್ಲಿ ಹಿಂದೆಂದೂ ಮಾಡಲಾಗದ ಐತಿಹಾಸಿಕ ಯೋಜನೆಗಳನ್ನು ಹಮ್ಮಿಕೊಂಡಿದೆ. 120 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್(ಬಿಬಿಸಿ) ಅನ್ನು ಕಾರ್ಯರೂಪಕ್ಕೆ ತರಲು ರೈತರ ಬಳಿ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಶೇ. 35 ರಷ್ಟು ವಾಣಿಜ್ಯ ಭೂಮಿಯನ್ನು ರೈತರಿಗೆ ಪರಿಹಾರವಾಗಿ ನೀಡಲಾಗುತ್ತಿದೆ. ಜತೆಗೆ ಸಣ್ಣ ಟೌನ್ ಶಿಪ್ ನಿರ್ಮಾಣಕ್ಕೆ ರೈತರಿಗೆ ಉತ್ತಮ ಪರಿಹಾರ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಒಂದೂವರೇ ಕಿ.ಮೀ ಟನಲ್ ರಸ್ತೆ ಬರಲಿದೆ. ಮೇಕ್ರಿ ವೃತ್ತದ ಬಳಿ ಮೇಲ್ಸೇತುವೆ ಸಾಗಲಿದೆ. ಇದನ್ನು ಮೂರು ಭಾಗವಾಗಿ ಕಟ್ಟಲಾಗುವುದು. ಇನ್ನು ತುಮಕೂರು ರಸ್ತೆಯಿಂದ ಕೆ.ಆರ್ ಪುರದ ವರೆಗೆ ಮೇಲ್ಸೇತುವೆ ಮೂಲಕ ಹೊರ ವರ್ತುಲ ರಸ್ತೆ(ಒಆರ್ ಆರ್) ಮಾಡಲು ಮುಂದಾಗಿದ್ದೇವೆ ಎಂದು ವಿವರಿಸಿದರು.
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಮತ್ತು ನೈಸ್ ಒಳಗೊಂಡ ಭೂ ಸಮಸ್ಯೆಗಳನ್ನು ಉಲ್ಲೇಖಿಸಿದ ಡಿಕೆ ಶಿವಕುಮಾರ್, ನೈಸ್ ಸಂಸ್ಥೆಯ ಕೆಲವು ಕೆಐಎಡಿಬಿ ಜಾಗವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೆವು. ಇದಕ್ಕೆ ಅವರು ತಕರಾರು ಎತ್ತಿದ್ದಾರೆ. ನೈಸ್ ನವರು ತಾವು ಸರ್ಕಾರಕ್ಕಿಂತ ದೊಡ್ಡವರು ಎಂದು ಭಾವಿಸಿದ್ದಾರೆ. ಹೀಗಾಗಿ ಬೇರೆ ದಾರಿ ಹುಡುಕುತ್ತೇವೆ ಎಂದರು.
ಸ್ಕೈಡೆಕ್ ಗಾಗಿ ನಾವು ಬೇರೆ ಕಡೆ ಬಿಡಿಎ ಜಾಗ ಗುರುತಿಸಿದ್ದೇವೆ. ವಿಮಾನ ಹಾರಾಟದ ಟವರ್ ಸಮಸ್ಯೆ ಇರುವ ಕಾರಣ, ಇದನ್ನು ಸೂಕ್ತ ಜಾಗದಲ್ಲಿ ನಿರ್ಮಿಸುತ್ತೇವೆ ಎಂದರು.
Advertisement