
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಬಳ್ಳಾರಿಯ ಹುಸೇನ್ ನಗರದಲ್ಲಿರುವ ರಾಜಶೇಖರ್ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಇದೇ ವೇಳೆ ಮೃತರ ಕುಟುಮ್ಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿದರು. ಕುಟುಂಬದ ಜೊತೆ ಕಾಂಗ್ರೆಸ್ ಪಕ್ಷ ಸರ್ಕಾರ ಸದಾ ಇರಲಿದೆ ಎಂದು ಭರವಸೆ ನೀಡಿದರು. ರಾಜಶೇಖರ್ ಕುಟುಂಬಕ್ಕೆ ಮನೆ ಕಟ್ಟಿ ಕೊಡಲಾಗುವುದು. ಪಕ್ಷದ ವತಿಯಿಂದಲೂ ನೆರವು ನೀಡಲಾಗುವುದು ಎಂದು ಹೇಳಿದರು. ಇನ್ನು ಅಧಿಕಾರ ವಹಿಸಿಕೊಂಡ ದಿನವೇ ಅಮಾನತುಗೊಂಡಿರುವ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನಜ್ಜೂರ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬಳ್ಳಾರಿಯ ಎಸ್ಪಿಯಾಗಿ ಪವನ್ ನಜ್ಜೂರ್ ಅಧಿಕಾರ ವಹಿಸಿಕೊಂಡ ಅದೇ ದಿನ ಸಂಜೆ ಜನಾರ್ದನ ರೆಡ್ಡಿಯವರ ನಿವಾಸದ ಮುಂದೆ ಗಲಾಟೆಯಾಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿತ್ತು.
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಲಕ್ಕೆ ನಿಂತಿರುವ ಡಿಸಿಎಂ ಡಿ ಕೆ ಶಿವಕುಮಾರ್, ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಕಾರಣವಾದ ಬಳ್ಳಾರಿ ಫೈರಿಂಗ್ ಘಟನೆಯ ನಂತರ ಖಾಸಗಿ ಬಂದೂಕುಗಳನ್ನು ಹೊಂದಲು ಅನುಮತಿ ನೀಡಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಯಾರ ಬಂದೂಕಿನಿಂದ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ತನಿಖೆಯಿಂದ ಬಹಿರಂಗವಾಗಲಿದೆ. ನಮ್ಮ ಕಾರ್ಯಕರ್ತನನ್ನು ಕೊಲೆ ಮಾಡಲಾಗಿದೆ. ಅದಕ್ಕೆ ಬಿಜೆಪಿಯೇ ಕಾರಣ ಎಂದು ಡಿಕೆ ಶಿವಕುಮಾರ್ ಆರೋಪಿಸಿದರು. ಇದೇ ವೇಳೆ ಪ್ರಕರಣ ಸಂಬಂಧ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಮಾಜಿ ಡಿಸಿಎಂ, ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಗಾಯಾಳು ನಿಂಗಪ್ಪ ಕರೆಣ್ಣವರ್, ಚಿದಾನಂದ ಸವದಿ ವಿರುದ್ಧ ಹಲ್ಲೆ ಆರೋಪ ಮಾಡಿದ್ದಾರೆ. ಮಾತುಕತೆಗಾಗಿ ಮನೆಗೆ ಕರೆದು ನನ್ನ ತಲೆ ಒಡೆಯುವಂತೆ ಹೊಡೆದಿದ್ದಾರೆ ಎಂದು ನಿಂಗಣ್ಣ ಕರೆಣ್ಣವರ್ ಆರೋಪ ಮಾಡಿದ್ದಾರೆ. ಸದ್ಯ ಗಾಯಗೊಂಡಿರುವ ನಿಂಗಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರ ನನಗೆ ರಕ್ಷಣೆ ನೀಡಬೇಕು. ಇಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿಂಗಪ್ಪ ಕರೆಣ್ಣವರ್ ಅಳಲು ತೋಡಿಕೊಂಡಿದ್ದಾರೆ. ಈ ಪ್ರಕರಣ ಇದೀಗ ಕಾನೂನು ಮತ್ತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ನೋಡಬೇಕಿದೆ.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ದುಗೊಳಿಸಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ಜಾರಿಗೆ ತರುವ ಕೇಂದ್ರದ ಕ್ರಮವನ್ನು ರಾಜ್ಯ ಸಚಿವ ಸಂಪುಟ ಖಂಡಿಸಿದ್ದು, ಗ್ರಾಮ ಪಂಚಾಯಿತಿಗಳ ಅಧಿಕಾರವನ್ನು ಮೊಟಕುಗೊಳಿಸಿ ಉದ್ಯೋಗ ಖಾತರಿ ಯೋಜನೆಯನ್ನು ಕೇಂದ್ರೀಕೃತಗೊಳಿಸಿದೆ ಎಂದು ಆರೋಪಿಸಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 'ದುಡಿಮೆಯ ಹಕ್ಕು' ನೀಡುವ ಉದ್ದೇಶದಿಂದ ನರೇಗಾ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಬಡವರಿಗೆ ಆರ್ಥಿಕ ಭದ್ರತೆ ನೀಡುವ ಈ ಕಾಯಿದೆಯನ್ನು ಈಗ 'ವಿಬಿ ರಾಮ್ ಜೀ' ಕಾಯಿದೆ ಎಂದು ಬದಲಾಯಿಸಲಾಗಿದೆ. ಈ ಮಹತ್ವದ ಬದಲಾವಣೆ ಮಾಡುವ ಮುನ್ನ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆಗಾಗಲಿ ಅಥವಾ ಜನರ ಜೊತೆಗಾಗಲಿ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. ಇದೇ ವಿಚಾರವಾಗಿ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್, ಮಹಾತ್ಮ ಗಾಂಧಿ ಹೆಸರನ್ನು ಉಳಿಸಿಕೊಂಡು ತನ್ನದೇ ಆದ ಉದ್ಯೋಗ ಖಾತರಿ ಯೋಜನೆಯನ್ನು ರೂಪಿಸುವ ಮೂಲಕ ಹೊಸ ಮಸೂದೆಯನ್ನು ತಿರಸ್ಕರಿಸುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ ಎಂದರು.
Advertisement