

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಅವರ ಪತ್ನಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು 2025ರ ಡಿಸೆಂಬರ್ 24 ರಂದು ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿ, ಹಲವಾರು ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮನ್ನು ಮತ್ತು ಅವರ ಕುಟುಂಬವನ್ನು ಗುರಿಯಾಗಿಟ್ಟುಕೊಂಡು ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿದ್ದರು.
'ಕೆಲವು ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವಿಜಯಲಕ್ಷ್ಮಿ ಮತ್ತು ಅವರ ಕುಟುಂಬದ ವಿರುದ್ಧ ಅಸಭ್ಯ ಮತ್ತು ಅಶ್ಲೀಲ ಕಮೆಂಟ್‌ಗಳನ್ನು ಪೋಸ್ಟ್ ಮಾಡುತ್ತಿದ್ದರು ಮತ್ತು ಸಂದೇಶಗಳನ್ನು ಕಳುಹಿಸುತ್ತಿದ್ದರು' ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಂತಹ ಅವಹೇಳನಕಾರಿ ವಿಷಯವನ್ನು ಪೋಸ್ಟ್ ಮಾಡಿದ 18ಕ್ಕೂ ಹೆಚ್ಚು ಜನರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತೆ ಕೋರಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆನ್‌ಲೈನ್‌ನಲ್ಲಿ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಜನವರಿ 4 ರಂದು ಪೊಲೀಸರು ಹುಬ್ಬಳ್ಳಿಯ ಕೇಶವಾಪುರದ ಪೆಟ್ರೋಲ್ ಬಂಕ್ ವ್ಯವಸ್ಥಾಪಕ ನಾಗರಾಜ್ ಗುಳ್ಳಪ್ಪ ತಳವಾರ್ (23) ಮತ್ತು ಧಾರವಾಡದ ಯಲವಾಲ್‌ನ ಲೆಕ್ಕಪರಿಶೋಧಕ ಪ್ರಶಾಂತ್ ತಳವಾರ್ (23) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಪ್ರಾರಂಭಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ಮುಂದುವರೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿತ್ರದುರ್ಗದ ತಮ್ಮ ಅಭಿಮಾನಿ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲಿನಲ್ಲಿದ್ದಾರೆ.
Advertisement