
ಹುಬ್ಬಳ್ಳಿಯಲ್ಲಿ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರಿಗೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಳ್ಳುವಾಗ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ಲಜ್ಜೆಗೆಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಎಗ್ಗಿಲ್ಲದೆ ನಡೆಯುತ್ತಿರುವ ದ್ವೇಷ ರಾಜಕಾರಣಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರು ಮಾಡಿರೋ ದೌರ್ಜನ್ಯ ಇಡೀ ರಾಜ್ಯವೇ ತಲೆ ತಗ್ಗಿಸೋ ಘಟನೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ಈ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ. ಮಹಿಳೆಯನ್ನ ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ. ವ್ಯಾನ್ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್ ಮಾಡಿದ್ದಾಳೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆ ಸುಜಾತಾ ಎಂಬುವವರು ಇತ್ತೀಚೆಗೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಗಲಾಟೆ ನಡೆದ ಹಿನ್ನೆಲೆ, ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರಿನ ಮೇರೆಗೆ ಕೇಶ್ವಾಪುರ ಪೊಲೀಸರು ಸುಜಾತಾ ಹಂಡಿಯನ್ನು ಬಂಧಿಸಲು ಮುಂದಾಗಿದ್ದರು. ಕಾಂಗ್ರೆಸ್ ಮತದಾರರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಿಸಿದ್ದ ಆರೋಪ ಹಂಡಿ ವಿರುದ್ಧ ಕೇಳಿಬಂದಿತ್ತು.
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆ ದಂಡವಾಗಿದೆ. ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಲಾಗಿತ್ತು. ನೂತನ ಐಜಿ ಆಗಿ ಪಿಎಸ್ ಹರ್ಷ ಹಾಗೂ ನೂತನ ಎಸ್ಪಿ ಆಗಿ ಡಾ.ಸುಮನ್ ಡಿ ಪೆನ್ನೇಕರ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ಜನವರಿ 1 ರಂದು ನಡೆದ ಘರ್ಷಣೆಯಲ್ಲಿ ರಾಜಕೀಯ ಕಾರ್ಯಕರ್ತನೊಬ್ಬನ ಹತ್ಯೆ ಪೂರ್ವ ಯೋಜಿತ ಪಿತೂರಿಯ ಪರಿಣಾಮವಾಗಿದೆ ಎಂದು ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ ಮತ್ತು ಈ ಘಟನೆಗೆ ಆಡಳಿತಾರೂಢ ಕಾಂಗ್ರೆಸ್ ಶಾಸಕ ನರ ಭರತ್ ರೆಡ್ಡಿ ಅವರೇ ನೇರ ಹೊಣೆ ಎಂದು ಆರೋಪಿಸಿದ್ದಾರೆ. ಜನಾರ್ದನ ರೆಡ್ಡಿ ಅವರು ಘಟನೆಯ ವೀಡಿಯೊ ಕ್ಲಿಪ್ ಅನ್ನು ಸಹ ಹಂಚಿಕೊಂಡಿದ್ದಾರೆ, ಇದರಲ್ಲಿ ಕಾಂಗ್ರೆಸ್ ನಾಯಕರ ಖಾಸಗಿ ಗನ್‌ಮ್ಯಾನ್ ರಾಜಶೇಖರ್ ಮೇಲೆ ಗುಂಡು ಹಾರಿಸಿದ್ದು, ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ.
ಜಯನಗರ ಶಾಸಕ ಸಿಕೆ ರಾಮಮೂರ್ತಿ ಅವರ ಫೇಸ್‌ಬುಕ್, ಇನ್ಸ್ಟಾಗ್ರಾಂ ಖಾತೆಯಿಂದ ಯುವತಿಯೊಬ್ಬರಿಗೆ ಸಂದೇಶ ಹೋಗಿದ್ದು, ತಮ್ಮ ಖಾತೆ ಹ್ಯಾಕ್ ಆಗಿರುವ ಕುರಿತು ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸೈಬರ್ ಕ್ರೈಂಗೆ ದೂರು ನೀಡಿದ್ದು, ಹ್ಯಾಕರ್ಸ್ ಹಾಗೂ ನಕಲಿ ಖಾತೆ ಸೃಷ್ಟಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಸಂದೇಶಗಳ ಸ್ಕ್ರೀನ್ ಶಾಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲದೇ ಮೊಬೈಲ್ ಹ್ಯಾಕ್ ಆಗಿದೆ ಎಂದು ಸಿ.ಕೆ ರಾಮೂರ್ತಿ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ಸಂಭವಿಸಿ ಎಂದು ಬೆಳಗಾವಿ ಗ್ರಾಮೀಣ ಜಿಲ್ಲೆಯ ಸೂಪರಿಂಟೆಂಡೆಂಟ್ ಕೆ. ರಾಮರಾಜನ್ ತಿಳಿಸಿದ್ದಾರೆ. ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ರಾಜ್ಯದಲ್ಲಿ ಇವಿಎಂ ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಡಾ.ನಾಗರಾಜ, ಜನವರಿ 3 ರಂದು ಕೆಲವು ದಿನಪತ್ರಿಕೆಗಳಲ್ಲಿ ಆಯೋಗ ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ. ಆದರೆ ಆಯೋಗ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement