

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಕ್ಕಳನ್ನು ಶೋಷಣೆಯಿಂದ ರಕ್ಷಿಸಲು ಪೊಲೀಸರು ವಾರದಲ್ಲಿ ನಾಲ್ಕು ದಿನ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ವಿಕಾಸ ಸೌಧದಲ್ಲಿ ಮಕ್ಕಳ ನಿಧಿ ಭಾರತದ ಸಹಯೋಗದೊಂದಿಗೆ ಆಯೋಜಿಸಿದ್ದ 'ಮಕ್ಕಳ ಆನ್‌ಲೈನ್ ಸುರಕ್ಷತೆ' ಕುರಿತು ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ಮಾಧ್ಯಮಗಳಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಪೊಲೀಸ್ ಮತ್ತು ಶಿಕ್ಷಣ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಮತ್ತು ರಕ್ಷಣೆಯಲ್ಲಿ ಹೂಡಿಕೆ ಮಾಡಬೇಕು ಎಂದು ಅವರು ಸೂಚಿಸಿದರು.
ಒಂದು ವರದಿಯ ಪ್ರಕಾರ, ಗ್ರಾಮೀಣ ಪ್ರದೇಶದ ಶೇ. 78 ರಷ್ಟು ಮಕ್ಕಳು ನಗರ ಪ್ರದೇಶದ ಮಕ್ಕಳಿಗಿಂತ ಮೊಬೈಲ್ ಫೋನ್, ಲ್ಯಾಪ್‌ಟಾಪ್, ಟ್ಯಾಬ್ ಮತ್ತು ಕಂಪ್ಯೂಟರ್‌ಗಳನ್ನು ಬಳಸುವ ವ್ಯಸನಿಗಳಾಗಿದ್ದಾರೆ. ಇದು ಮಹಿಳೆಯರು ಮತ್ತು ಹುಡುಗಿಯರ ಮೇಲಿನ ಅತ್ಯಾಚಾರ ಪ್ರಕರಣ ಹೆಚ್ಚಳಕ್ಕೆ ಕಾರಣವಾಗಿದೆ. ಇದನ್ನು ತಡೆಗಟ್ಟಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
14 ರಿಂದ 18 ವರ್ಷ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮಕ್ಕೆ ಹೆಚ್ಚು ವ್ಯಸನಿಗಳಾಗಿದ್ದಾರೆ. ಇದು ನಿಜಕ್ಕೂ ಕಳವಳಕಾರಿ. ಕಾನೂನು, ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳನ್ನು ಒಳಗೊಂಡ ಸಮಿತಿ ರಚನೆಯಾಗಿದ್ದರೂ, ಸಾಮಾಜಿಕ ಮಾಧ್ಯಮ ಮತ್ತು ಆನ್‌ಲೈನ್ ಕಿರುಕುಳದ ಪಿಡುಗು ನಿಂತಿಲ್ಲ ಅಥವಾ ಕಡಿಮೆಯಾಗಿಲ್ಲ ಎಂದರು.
ಕೆಎಸ್‌ಸಿಪಿಸಿಆರ್ ಅಧ್ಯಕ್ಷ ಶಶಿಧರ್ ಕೊಸಂಬೆ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ ಪದ್ಮಾವತಿ, ಡಿಡಿಪಿಐಗಳು, ಡಯಟ್ ಪ್ರಾಂಶುಪಾಲರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement