

ಬೆಂಗಳೂರು: ತಿಂಥಣಿ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮಾನಂದ ಸ್ವಾಮೀಜಿ (49) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದು, ಸ್ವಾಮೀಜಿಗಳ ನಿಧನಕ್ಕೆ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
ಅಗಲಿದ ಕಾಗಿನೆಲೆ ಕನಕ ಪೀಠದ ಸ್ವಾಮೀಜಿಗೆ ನಮನ. ದೇವದುರ್ಗ ತಿಂಥಣಿಯ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಅವರು ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಸ್ವಾಮೀಜಿಯವರು ಶಾಲಾ ಮಕ್ಕಳಿಗೆ ಉಚಿತ ದಾಸೋಹದ ವ್ಯವಸ್ಥೆ, ಕನಕಗುರು ಪೀಠದಲ್ಲಿ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಆಯೋಜನೆ ಸೇರಿದಂತೆ ಸದಾ ಜನಪರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇದೀಗ ಸ್ವಾಮೀಜಿಯವರು ಅಪಾರ ಸಂಖ್ಯೆಯ ಭಕ್ತರನ್ನು ಅಗಲಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಭಕ್ತರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ತಿಳಿಸಿದ್ದಾರೆ.
ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ಅತ್ಯಂತ ನೋವುಂಟುಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ.
ಧಾರ್ಮಿಕ-ಸಮಾಜಮುಖಿ ಸೇವೆಗಳ ಮೂಲಕ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ ಮತ್ತು ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಪವಿತ್ರ ಆತ್ಮಕ್ಕೆ ಶಾಂತಿ ನೀಡಲಿ, ಭಕ್ತರಿಗೆ ಹಾಗೂ ಶಿಷ್ಯವೃಂದಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ತಿಂಥಿಣಿ ಬ್ರಿಡ್ಜ್ ಕಲ್ಬುರ್ಗಿ ವಿಭಾಗೀಯ ಪೀಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.
ಆಧ್ಯಾತ್ಮದ ಜೊತೆಗೆ ಶಿಕ್ಷಣ, ಸಾಹಿತ್ಯ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಗಣನೀಯ ಕೊಡುಗೆ ನೀಡಿದ್ದರು. ಅವರ ಅಗಲಿಕೆಯಿಂದ ನಾಡಿನ ಧಾರ್ಮಿಕ, ಸಾಮಾಜಿಕ, ಸಾಂಕೃತಿಕ ವಲಯಕ್ಕೆ ದೊಡ್ಡ ನಷ್ಟವಾಗಿದೆ. ಭಗವಂತನು ಪೂಜ್ಯರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ, ಅವರ ಅಸಂಖ್ಯಾತ ಭಕ್ತರಿಗೆ ಮತ್ತು ಶಿಷ್ಯವರ್ಗಕ್ಕೆ ಗುರುಗಳ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
Advertisement