

ಬೆಳಗಾವಿ: ಶುಕ್ರವಾರ ರಾತ್ರಿ ನಿಧನರಾದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ಶನಿವಾರ ಪಂಚಭೂತಗಳಲ್ಲಿ ಲೀನವಾಗಿದ್ದು, ಭಾಲ್ಕಿ ಹೊರವಲಯದ ಚಿಕಲ್ ಚೆಂದ ರಸ್ತೆಯಲ್ಲಿರುವ ಶಾಂತಿಧಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ.
ಇಂದು ಸಂಜೆ ಪತ್ನಿ ಲಕ್ಷ್ಮೀಬಾಯಿ ಸಮಾಧಿ ಪಕ್ಕದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿವಿಧಾನದಂತೆ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ನಡೆಸಲಾಗಿದೆ.
ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಎಚ್. ಕೆ ಪಾಟೀಲ್, ಎಸ್.ಎಸ್ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಗಣ್ಯರು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ, ಅರಣ್ಯ ಸಚಿವ ಈಶ್ವರ ಖಂಡ್ರೆಯವರ ತಂದೆ ಭೀಮಣ್ಣ ಖಂಡ್ರೆ ಅವರು ಶುಕ್ರವಾರ ರಾತ್ರಿ ವಿಧಿವಶರಾಗಿದ್ದರು.
ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಬಳಿಕ ಭೀಮಣ್ಣ ಖಂಡ್ರೆಯವರ ನಿವಾಸದಿಂದ ಶಾಂತಿಧಾಮಕ್ಕೆ ತರಲಾಯಿತು.
Advertisement