

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಾವು ಪ್ರತಿನಿಧಿಸುತ್ತಿರುವ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 323.04 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟಿ.ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ, "ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಸಿಎಂ ನೆರವೇರಿಸಿದರು.
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ಅಭಿವೃದ್ಧಿಪರವಾದ ಚಿಂತನೆಗಳಲ್ಲಿ ನಂಬಿಕೆಯನ್ನಿಟ್ಟು ಆಶೀರ್ವದಿಸಿದ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ನಡೆಯುವುದು ನನ್ನ ಧರ್ಮ. ಇಂದು ಕೋಟ್ಯಂತರ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಜನರ ಋಣಭಾರವನ್ನು ಸ್ವಲ್ಪ ಮಟ್ಟಿಗೆ ತಗ್ಗಿಸುವ ಪ್ರಯತ್ನ ಮಾಡಿದ್ದೇನೆ ಎಂದರು.
2024ರಲ್ಲಿ ನಡೆದ ಸಮಾರಂಭದಲ್ಲಿ 501 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದರೆ, 2025 ರಲ್ಲಿ ನಡೆದ ಕಾರ್ಯಕ್ರಮದಲ್ಲಿ 1,108 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದರು.
ಇಂದು ಚಾಲನೆ ನೀಡಲಾದ 323 ಕೋಟಿ ರೂ. ಮೌಲ್ಯದ ಕಾಮಗಾರಿಗಳನ್ನು ಸಹ ಗಣನೆಗೆ ತೆಗೆದುಕೊಂಡರೆ, ವರುಣಾ ವಿಧಾನಸಭಾ ಕ್ಷೇತ್ರವೊಂದರಲ್ಲಿಯೇ ಒಟ್ಟು 1,932 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Advertisement