

ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ. ನಿನ್ನೆ ಲ್ಯಾಬ್‌ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ 19 ವರ್ಷದ ಝಕಿಯಾ ಮುಲ್ಲಾ ಎಂದು ತಿಳಿದುಬಂದಿದೆ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಬೇರೆ ಕಡೆ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಕೊಲೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿಯಲಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement