ಉಡುಪಿ ಕೇಸರಿ ಧ್ವಜ ವಿವಾದ: ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದ ಜಿಲ್ಲಾಧಿಕಾರಿ; ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ, ಬಿಜೆಪಿ ಕಿಡಿ

ಜನವರಿ 18 ರಂದು ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುವಾಗ ಕೇಸರಿ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾ ಕಾಂಗ್ರೆಸ್ ಸಿಎಂಗೆ ಪತ್ರ ಬರೆದಿದೆ.
Udupi DC Swaroopa TK
ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಕೇಸರಿ ಧ್ವಜ ಪ್ರದರ್ಶಿಸಿದ್ದ ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪಾ.
Updated on

ಉಡುಪಿ: ಇಲ್ಲಿನ ಕೃಷ್ಣಮಠದ ಪರ್ಯಾಯದ ಮೆರವಣಿಗೆ ವೇಳೆ ಕೇಸರಿ ಧ್ವಜ ಪ್ರದರ್ಶಿಸಿದ ವಿಚಾರ ಇದೀಗ ವಿವಾದಕ್ಕೀಡಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪಾ ಅವರು ತಮ್ಮ ಅಧಿಕೃತ ಕರ್ತವ್ಯದ ಭಾಗವಾಗಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೆ ಮತ್ತು ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜನವರಿ 18 ರಂದು ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುವಾಗ ಕೇಸರಿ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ.

'ಉಡುಪಿ ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವ ಕಾರ್ಯಕ್ರಮದ ಭಾಗವಾಗಿ ಜನವರಿ 18ರ ಭಾನುವಾರ ಬೆಳಗಿನ ಜಾವ 3 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ಕರ್ತವ್ಯದ ಭಾಗವಾಗಿ, ಸ್ವಾಮೀಜಿಯವರ ಪುರಪ್ರವೇಶ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಅದೇ ರೀತಿ, ನೂತನ ಪರ್ಯಾಯ ಸ್ವಾಮೀಜಿಯ ಸನ್ಮಾನ ಸಮಾರಂಭ ಮತ್ತು ಸ್ವಾಮೀಜಿ ಸರ್ವಜ್ಞ ಪೀಠವನ್ನು ಏರಿದ ನಂತರ ನಡೆದ ದರ್ಬಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಇದರಲ್ಲಿ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಇರಲಿಲ್ಲ ಎಂಬುದನ್ನು ಸಾರ್ವಜನಿಕರ ಗಮನಕ್ಕೆ ತರಲು ನಾನು ಬಯಸುತ್ತೇನೆ' ಸ್ವರೂಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನವರಿ 18 ರಂದು ನಡೆದ ಪರ್ಯಾಯವು ಉಡುಪಿ ಶ್ರೀ ಕೃಷ್ಣ ದೇವಸ್ಥಾನದ ಧಾರ್ಮಿಕ ಮತ್ತು ಆಡಳಿತಾತ್ಮಕ ನಿಯಂತ್ರಣವನ್ನು ಶಿರೂರು ಮಠಕ್ಕೆ ವಿಧ್ಯುಕ್ತವಾಗಿ ವರ್ಗಾಯಿಸುವ ಸಂಕೇತವಾಗಿದ್ದು, ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ 2026-28ರ ಅವಧಿಗೆ ದೇವಾಲಯದ ಪೀಠಾಧಿಪತಿಯಾಗಿ ಅಧಿಕಾರ ವಹಿಸಿಕೊಂಡರು.

Udupi DC Swaroopa TK
ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿದ ಪರ್ಯಾಯ : ಪುತ್ತಿಗೆ ಶ್ರೀಗಳಿಂದ ಕೃಷ್ಣ ಪೂಜಾ ಕೈಂಕರ್ಯ ಶಿರೂರು ಮಠಕ್ಕೆ ಹಸ್ತಾಂತರ

ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ ಸೋಮವಾರ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, 'ದಿನಾಂಕ 18/01/2026 ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಉಡುಪಿ ನಗರದ ಜೋಡುಕಟ್ಟೆಯಿಂದ ಶ್ರೀ ಕೃಷ್ಣ ಮಠಕ್ಕೆ ಪರ್ಯಾಯ ಮೆರವಣಿಗೆ ನಡೆಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪರ್ಯಾಯ ಮೆರವಣಿಗೆ ಪ್ರಾರಂಭವಾಗುವ ಮೊದಲು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಆರ್‌ಎಸ್‌ಎಸ್ ಧ್ವಜವನ್ನು ಜಿಲ್ಲಾಧಿಕಾರಿಗೆ ಹಸ್ತಾಂತರಿಸಿದರು. ನಂತರ ಜಿಲ್ಲಾಧಿಕಾರಿ ಈ ಧ್ವಜವನ್ನು ಮೇಲಕೆತ್ತಿ ಸಾರ್ವಜನಿಕವಾಗಿ ಪ್ರದರ್ಶಿಸಿದರು' ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

'ಜಿಲ್ಲಾಧಿಕಾರಿಯವರ ಈ ನಡೆಯು ಸರ್ಕಾರಿ ಸೇವಾ ನಿಯಮಗಳು ಮತ್ತು ಸಂವಿಧಾನದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ಈ ರೀತಿಯ ಕ್ರಮವು ಅತ್ಯಂತ ಆಕ್ಷೇಪಾರ್ಹವಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸರಿಯಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾನು ವಿನಮ್ರವಾಗಿ ವಿನಂತಿಸುತ್ತೇನೆ' ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ

ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಈ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಸಿಟಿ ರವಿ, ಕಾಂಗ್ರೆಸ್‌ನ ಹಿಂದೂ ವಿರೋಧಿ ಸಿದ್ಧಾಂತವನ್ನು ಪ್ರಶ್ನಿಸಿದರು ಮತ್ತು ಜಿಲ್ಲಾಧಿಕಾರಿಯನ್ನು ಸಮರ್ಥಿಸಿಕೊಂಡರು.

'ಇದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ಸಿದ್ಧಾಂತವನ್ನು ತೋರಿಸುತ್ತದೆ. ಭಗವಾ ಧ್ವಜದ ಮೇಲೆ ನಿಷೇಧವಿದೆಯೇ ಅಥವಾ ಅದು ಪಾಕಿಸ್ತಾನದ ಧ್ವಜವೇ? ಇದು ಕೋಟ್ಯಂತರ ಜನರಿಗೆ ಸ್ಫೂರ್ತಿ ನೀಡುತ್ತದೆ. ಏಕೆಂದರೆ, ಅದು ತ್ಯಾಗ ಮತ್ತು ಧೈರ್ಯವನ್ನು ಸೂಚಿಸುತ್ತದೆ. ಕೇಸರಿ ಧ್ವಜವನ್ನು ಹಾರಿಸುವುದು ಅಪರಾಧವಲ್ಲ... ಜಿಲ್ಲಾಧಿಕಾರಿ ಯಾವುದೇ ಅಪರಾಧ ಮಾಡಿಲ್ಲ. ಸಂವಿಧಾನವನ್ನು ಓದಿ, ಅಲ್ಲಿ ಭಗವಾನ್ ರಾಮ, ಶ್ರೀಕೃಷ್ಣ ಮತ್ತು ಭಗವಾನ್ ಬುದ್ಧನ ಫೋಟೊಗಳಿವೆ. ಅದರ ಸಂದೇಶವೇನು? ಕೇಸರಿಯಿಂದ ಒಬ್ಬ ಭಯೋತ್ಪಾದಕನೂ ಹುಟ್ಟಿಲ್ಲ, ಅದು ಯಾವಾಗಲೂ ತ್ಯಾಗ ಮತ್ತು ಧೈರ್ಯದ ಸಂದೇಶ ನೀಡುತ್ತದೆ...' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com