

ಮೈಸೂರು: ಮಲೆ ಮಹದೇಶ್ವರ (ಎಂಎಂ) ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತನ ಬಲಿಪಡೆದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆ ಹಿಡಿದಿದೆ. ಇದರೊಂದಿಗೆ ಹಲವು ದಿನಗಳಿಂದ ಮುಂದುವರಿದಿದ್ದ ಕಾರ್ಯಾಚರಣೆ ಗುರುವಾರ ತಡರಾತ್ರಿ ಅಂತ್ಯಗೊಂಡಿದೆ.
ಕರ್ನಾಟಕ ಅರಣ್ಯ ಇಲಾಖೆಯ ನೇತೃತ್ವದಲ್ಲಿ ಡ್ರೋನ್ ಮೇಲ್ವಿಚಾರಣೆ ಹಾಗೂ ಸ್ಥಳೀಯ ಮಟ್ಟದಲ್ಲಿ ತೀವ್ರ ಕಣ್ಗಾವಲು ಮೂಲಕ ಚಿರತೆಯ ಚಲನವಲನವನ್ನು ಪತ್ತೆ ಹಚ್ಚಲಾಯಿತು. ಕೊನೆಗೆ ಅರವಳಿಕೆ ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಕಾರ್ಯಾಚರಣೆಯಲ್ಲಿ ಪಶುವೈದ್ಯರಾದ ಆದರ್ಶ್ ಅವರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿದ್ದರು. ಸೆರೆ ಸಿಕ್ಕಿರುವುದು ಸುಮಾರು 2ರಿಂದ 3 ವರ್ಷದ ಗಂಡು ಚಿರತೆ ಎಂದು ತಿಳಿದುಬಂದಿದೆ.
ಈ ಚಿರತೆಯನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ತೀರ್ಮಾನಿಸಿದೆ. ಇದೇ ವೇಳೆ, ಚಿರತೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಉಸ್ತುವಾರಿ ಸಚಿವ ವೆಂಕಟೇಶ್ ಅವರು 5 ಲಕ್ಷ ರೂಪಾಯಿ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದ್ದಾರೆ.
ಬುಧವಾರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಮೇಲೆ ಚಿರತೆ ದಾಳಿ ನಡೆಸಿತ್ತು.
Advertisement