

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯನ್ನು ಖುದ್ದು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಅವರು ಶನಿವಾರ ಸೂಚನೆ ನೀಡಿದ್ದಾರೆ.
ಟೌನ್ ಹಾಲ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದಂತೆ ಜನವರಿ 22 ರಂದು ರಾಜ್ಯ ಚುನಾವಣಾ ಆಯೋಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದೆ. ಅದರಂತೆ, ಎಲ್ಲಾ ಐದು ಪಾಲಿಕೆಗಳ ಅಧಿಕಾರಿಗಳಿಗೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಆಯಾ ಪಾಲಿಕೆ ಅಧಿಕಾರಿಗಳು ವಾರ್ಡ್ ಗಳಿಗೆ ಖುದ್ದಾಗಿ ಪರಿಶೀಲಿಸಬೇಕು. ಗೊಂದಲವನ್ನು ತಪ್ಪಿಸಬೇಕು ಎಂದು ಸೂಚನೆ ನೀಡಿದರು.
ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹದ ಜೊತೆಗೆ ಚುನಾವಣಾ ಕೆಲಸಕ್ಕೆ ಆದ್ಯತೆ ನೀಡಬೇಕು. ಯಾವುದೇ ಲೋಪದೋಷಗಳಿಲ್ಲದೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು,
ಮತದಾರರ ಪಟ್ಟಿ ಪರಿಷ್ಕರಣೆಯ ಸಮಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಪ್ರತಿ ಮನೆಗೆ ಭೇಟಿ ನೀಡುವುದನ್ನು ಮತ್ತು ಸೇರ್ಪಡೆ, ತಿದ್ದುಪಡಿ ಪ್ರಕ್ರಿಯೆಯನ್ನು ನಡೆಸುವಾಗ ಸಂಬಂಧಿತ ದಾಖಲೆಗಳಿರುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.
Advertisement