

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರು ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದ್ದು ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ನಲ್ಲೇ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತು ಜನವರಿ 9ರಂದು ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಆದೇಶ ಪ್ರಕಟಿಸಿದೆ.
ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಸಂಬಂಧ ಆಧರಿಸಲಾದ ಎಲ್ಲ ವಾದಗಳನ್ನು ಮುಕ್ತವಾಗಿರಿಸಲಾಗಿದೆ. ಅರ್ಜಿದಾರರ ಮನವಿ ಕುರಿತಂತೆ ವಿಚಾರಣಾರ್ಹತೆಯ ಮೇಲೆ ಯಾವುದೇ ತೀರ್ಮಾನವನ್ನು ನ್ಯಾಯಾಲಯ ದಾಖಲಿಸಿಲ್ಲ. ಅರ್ಜಿದಾರರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿಯೇ ಅರ್ಜಿ ಸಲ್ಲಿಸಲಿ ಎಂಬ ಕಾರಣಕ್ಕೆ ಅರ್ಜಿ ಇತ್ಯರ್ಥಪಡಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದೆ.
ಪ್ರಕರಣ ಸಂಬಂಧ ವಿನಯ್ ಕುಲಕರ್ಣಿಗೆ 2021ರಲ್ಲೇ ಕೋರ್ಟ್ನಿಂದ ಜಾಮೀನು ಸಿಕ್ಕಿತ್ತು. ಆದರೆ ಇತ್ತೀಚೆಗೆ ಸಾಕ್ಷಗಳಿಗೆ ಬೆದರಿಕೆ ಹಾಕುವ ಮೂಲಕ ಜಾಮೀನು ಷರತ್ತುಗಳನ್ನು ವಿನಯ್ ಕುಲಕರ್ಣಿ ಉಲ್ಲಂಘಿಸಿದ್ದು, ಜಾಮೀನು ರದ್ದುಪಡಿಸುವಂತೆ ಸಿಬಿಐ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಬಳಿಕ ಸುಪ್ರೀಂಕೋರ್ಟ್ ಸಿಬಿಐನ ಸಾಕ್ಷಿಗಳನ್ನ ಪರಿಶೀಲಿಸಿ ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಬಿಜೆಪಿಯ ಯೋಗೇಶ್ ಗೌಡರನ್ನು 2016ರ ಜೂನ್ 15ರಂದು ಧಾರವಾಡದ ಸಪ್ತಪುರದ ಜಿಮ್‌ನಲ್ಲಿ ಹತ್ಯೆ ಮಾಡಲಾಗಿತ್ತು.
Advertisement