

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಮಂಗಳವಾರ ಜೈಲು ಪಾಲಾಗಿದ್ದು, ಜೆಎಂಎಫ್ಸಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅವರನ್ನು ನಿನ್ನೆ ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ಇಂದು ಆರೋಪಿಯನ್ನು ಶಿಡ್ಲಘಟ್ಟ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದ್ದರು.
ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕರು, ಹೆಚ್ಚಿನ ತನಿಖೆಗಾಗಿ ಆರೋಪಿ ರಾಜೀವ್ ಗೌಡ ಅವರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ವಾದಿಸಿದರು. ಇತ್ತ ಜಾಮೀನಿಗಾಗಿ ಆರೋಪಿ ಪರ ವಕೀಲರು ಕೂಡ ವಾದ ಮಂಡಿಸಿದ್ದರು.
ರಾಜೀವ್ ಗೌಡ ಪರ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದ್ದು, ಇದು ರಾಜಕೀಯ ಪ್ರೇರಿತ ದೂರು. ಘಟನೆ ನಡೆದ ಎರಡು ದಿನಗಳ ಬಳಿಕ ದೂರು ನೀಡಲಾಗಿದೆ. ಈಗಾಗಲೇ ಆರೋಪಿಯು ಮಾಧ್ಯಮಗಳ ಮೂಲಕ ಕ್ಷಮೆಯನ್ನೂ ಕೇಳಿದ್ದಾರೆ. ಕೇವಲ ಜೈಲಿಗೆ ಹಾಕಬೇಕೆಂಬ ಉದ್ದೇಶದಿಂದ ಸೆಕ್ಷನ್ ಹಾಕಲಾಗಿದೆ. ಹೀಗಾಗಿ ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಪಿಗೆ ರಾಜೀವ್ ಗೌಡನಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದ ರಾಜೀವ್ ಗೌಡ ವಿರುದ್ಧ ಕೇಸ್ ದಾಖಲಿಸಲಾಗಿದೆ.
Advertisement