

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ (ಮನರೇಗಾ) ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ ನಡೆಸಿದರು. ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು. ಮನರೇಗಾ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮನರೇಗಾ ಹೆಸರು ಮರು ಸ್ಥಾಪನೆ ಮಾಡುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಇನ್ನು ಪ್ರತಿಭಟನಾ ವೇದಿಕೆ ಮೇಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕುಳಿತಿದ್ದರು. ಈ ವೇಳೆ ಮಾತನಾಡಲು ಸಿಎಂ ಸಿದ್ದರಾಮಯ್ಯ ಬರುತ್ತಿದ್ದಂತೆ ಡಿಕೆ ಶಿವಕುಮಾರ್ ಅಭಿಮಾನಿಗಳು ಡಿಕೆ ಡಿಕೆ ಎಂದು ಘೋಷಣೆಗಳನ್ನು ಕೂಗಿದರು. ಈ ವೇಳೆ ಸಿಟ್ಟಾದ ಸಿದ್ದರಾಮಯ್ಯ ಸುಮ್ಮನೆ ಕುಳಿತುಕೊಳ್ಳುವಂತೆ ಸೂಚಿಸಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Advertisement