

ಬೆಂಗಳೂರು: ಇತ್ತೀಚಿಗೆ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ.
ಚೈತನ್ಯಾ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ ಉದ್ಯೋಗ ನೀಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.
ಕಳೆದ ವರ್ಷ ನವೆಂಬರ್ 25ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದರು.
Advertisement