

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಶುಕ್ರವಾರ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಶಿಡ್ಲಘಟ್ಟದ ಜೆಎಂಎಫ್ಸಿ ಕೋರ್ಟ್, ಆರೋಪಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಪ್ರಮುಖವಾಗಿ ಜಾಮೀನು ಸಿಕ್ಕ ಖುಷಿಯಲ್ಲಿ ಪಟಾಕಿ ಹಚ್ಚಿ, ಸಂಭ್ರಮಾಚರಣೆ ಮಾಡದಂತೆ ನ್ಯಾಯಾಧೀಶ ಮೊಹಮ್ಮದ್ ರೋಷನ್ ಶಾ ಅವರು ತಾಕೀತು ಮಾಡಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದ ರಾಜೀವ್ ಗೌಡ ವಿರುದ್ಧ ಕೇಸ್ ದಾಖಲಿಸಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅವರನ್ನು ಪೊಲೀಸರು ಜನವರಿ 26 ರಂದು ಕೇರಳದಲ್ಲಿ ಬಂಧಿಸಿದ್ದರು.
Advertisement