

ಚಿಕ್ಕಬಳ್ಳಾಪುರ: 8 ಜನರ ಸಾವಿಗೆ ಕಾರಣವಾದ ರಾಮನಗರ ಕ್ವಾರಿ ದುರಂತ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಕ್ವಾರಿ ದುರಂತ ಸಂಭವಿಸಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಸಮೀಪದ ಹಿರೇನಗವಳ್ಳಿ ಬೆಟ್ಟದಲ್ಲಿರುವ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ.
ಮೃತರನ್ನು ಆಂಧ್ರಪ್ರದೇಶದ ಧರ್ಮಾವರಂ ಮೂಲದ 35 ವರ್ಷದ ನಾಗೇಂದ್ರ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಬುಧವಾರ ಸಂಜೆ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದ್ದು, ನಾಗೇಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.