

ಉಡುಪಿ: ಜಿಲ್ಲೆಯ ಖಾಸಗಿ ಶಾಲೆಯೊಂದರ ಬಸ್ಸು ಇಂದು ಶುಕ್ರವಾರ ಬೆಳಗ್ಗೆ ಪಲ್ಟಿಯಾಗಿದ್ದು, ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸರಳೆಬೆಟ್ಟು ಸಮೀಪದ ಕೊಡಂಗೆ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ದೇವಸ್ಥಾನದ ಬಳಿ ಬಸ್ ನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ, ಪಲ್ಟಿಯಾಗಿದ್ದ ಬಸ್‌ನಲ್ಲಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದರು. ಬಳಿಕ ಗಾಯಾಳು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಈ ಸಂಬಂಧ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.