

ಬೆಂಗಳೂರು: ರಾಜ್ಯದಾದ್ಯಂತ "'ಭಾರತ್ ಜೋಡೋ ಯುವ ಸಂಘ"ಗಳನ್ನು ಸ್ಥಾಪಿಸುವ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ಸಂಘಗಳನ್ನು ಒಂದು ತಿಂಗಳೊಳಗೆ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಪರಮೇಶ್ವರ್ ಅವರು, ಪ್ರತಿ ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರದಿಂದ ರೂ.10 ಲಕ್ಷ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರತಿಯೊಂದು ಸಂಘದಲ್ಲೂ 100ರಿಂದ 250 ಸದಸ್ಯರು ಇರಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ ಭಾರತ್ ಜೋಡೋ ಯಾತ್ರೆಯ ಸ್ಮರಣಾರ್ಥ ಈ ಯೋಜನೆ ಜಾರಿಗೊಳ್ಳುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭಾರತ್ ಜೋಡೋ ಯಾತ್ರೆಯ ನೆನಪಿಗಾಗಿ ವಿಶೇಷ ಕಾರ್ಯಕ್ರಮ ಘೋಷಿಸುವ ಭರವಸೆ ನೀಡಲಾಗಿತ್ತು. ಆ ಪ್ರಸ್ತಾವನೆಗೆ ಮುಖ್ಯಮಂತ್ರಿ ಇತ್ತೀಚೆಗೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಈ ಯೋಜನೆ ಜಾರಿಯಾಗಲಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂಘಗಳ ರಚನೆಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಈ ಸಂಘಗಳು ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ದಿನಗಳ ಮಹತ್ವದ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿವೆ ಎಂದು ಹೇಳಿದರು.
"ಯುವಕರ ಸಬಲೀಕರಣಕ್ಕಾಗಿ ರೂ.1,000 ಕೋಟಿ ವೆಚ್ಚವಾದರೂ ತಪ್ಪಿಲ್ಲ. ಈ ವಿಷಯವನ್ನು ಸಚಿವ ಸಂಪುಟದಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ" ಎಂದು ಸಮರ್ಥಿಸಿಕೊಂಡರು.
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ವಿಳಂಬದ ಕುರಿತು ಪ್ರತಿಕ್ರಿಯಿಸಿದ ಅವರು, ಆಗಸ್ಟ್‌ನಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನಕ್ಕೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಸುಮಾರು 20 ಸಚಿವ ಸ್ಥಾನಗಳು ಖಾಲಿ ಇದ್ದು, ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಮರಳಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.