

ನವದೆಹಲಿ : ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಡಿ. 31ರ ಒಳಗಾಗಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ.
ಈ ಹಿಂದೆ ಆಗಸ್ಟ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೆ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿತ್ತು. ಇಂದು ಈ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಮಹತ್ವದ ತೀರ್ಪು ಹೊರಬಂದಿದೆ.
ಸರ್ಕಾರದ ವಾದ ಆಲಿಸಿದ ಸುಪ್ರೀಂ ಕೋರ್ಟ್ ಸರ್ಕಾರ ಡಿಸೆಂಬರ್ 31 ತನಕ ಸಮಯ ನೀಡುವಂತೆ ಮನವಿ ಮಾಡಿದ್ದರಿಂದ ಮತ್ತೆ ಡಿಸೆಂಬರ್ 31ರ ತನಕ ಸಮಯಾವಕಾಶ ನೀಡಿದೆ. ಇದೇ ಕೊನೆಯ ಅವಕಾಶ. ಮತ್ತೆ ಯಾವುದೇ ಕಾಲಾವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಮಹತ್ವದ ಆದೇಶ ಹೊರಬಿದ್ದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಜಿಬಿಎ ಮಾತ್ರವಲ್ಲದೆ ಬಾಕಿ ಉಳಿದಿರುವ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಿಗದಿತ ಅವಧಿಯೊಳಗೆ ನಡೆಸುವುದಾಗಿ ಪ್ರಕಟಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸುಪ್ರೀಂ ಕೋರ್ಟ್ ನೀಡಿರುವ ಗಡುವಿನೊಳಗಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಚುನಾವಣಾ ಪೂರ್ವ ಸಿದ್ಧತೆಗಳು ಮತ್ತು ತಾಂತ್ರಿಕ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದ ಕಾರಣ ನಾವು ನ್ಯಾಯಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದ್ದೆವು. ಆದರೆ ಈಗ ಸುಪ್ರೀಂ ಕೋರ್ಟ್ ಅಂತಿಮ ಗಡುವು ನೀಡಿರುವುದರಿಂದ, ಅದರ ಆದೇಶವನ್ನು ಗೌರವಿಸಿ ಪಾಲಿಸುತ್ತೇವೆ" ಎಂದರು.
ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳು ಸೇರಿದಂತೆ ರಾಜ್ಯದಲ್ಲಿ ಬಾಕಿ ಇರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಮುನ್ಸಿಪಾಲಿಟಿ ಸೇರಿದಂತೆ ಎಲ್ಲಾ ಹಂತದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಟ್ಟಿಗೆ ಎದುರಿಸಲು ಸರ್ಕಾರ ಸಿದ್ಧವಿದೆ ಎಂದು ಅವರು ಭರವಸೆ ನೀಡಿದ್ದಾರೆ.