

ಬೆಂಗಳೂರು: ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯದಲ್ಲಿ ವಿವಾದಾತ್ಮಕ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಗಾಗಿ 513 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಜೂನ್ 13ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಮೈಸೂರು ಜಿಲ್ಲೆಯ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಿನ್ನೆ ಸೋಮವಾರ ವಜಾಗೊಳಿಸಿದೆ.
ಆದರೆ, ಈ ಆದೇಶವನ್ನು ಪ್ರಶ್ನಿತ ಅಧಿಸೂಚನೆಗೆ ಸಂಬಂಧಿಸಿದ ವಿಷಯಗಳ ಕುರಿತು ನ್ಯಾಯಾಲಯ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ಪರಿಗಣಿಸಬಾರದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಾಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ರಾಜೇಶ್ ಕಂಪಲಾಪುರ ಬಸವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಈ ಆದೇಶ ನೀಡಿದೆ.
ಅರ್ಜಿದಾರರು ಪ್ರಶ್ನಿತ ಅಧಿಸೂಚನೆಯ ಪ್ರತಿಯೊಂದಿಗೆ ಕರ್ನಾಟಕ ಪ್ರಾದೇಶಿಕ ಅಸಮಾನತೆ ನಿವಾರಣಾ ಸಮಿತಿಯ ವರದಿಯನ್ನು ಲಗತ್ತಿಸಿ, ಕರ್ನಾಟಕ ನಗರಾಭಿವೃದ್ಧಿ ಕಾಯ್ದೆಯಡಿ ಅಧಿಸೂಚನೆ ಹೊರಡಿಸಲಾಗಿದ್ದರೂ, ಭೂಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರವನ್ನು ನ್ಯಾಯಸಮ್ಮತ ಪರಿಹಾರ ಹಾಗೂ ಭೂಸ್ವಾಧೀನ, ಪುನರ್ವಸತಿ ಮತ್ತು ಮರುನೆಲೆಗೊಳಿಸುವಿಕೆಯಲ್ಲಿ ಪಾರದರ್ಶಕತೆ ಹಕ್ಕು ಕಾಯ್ದೆ–2013ರಡಿ ನೀಡಲಾಗುತ್ತಿದೆ. ಇದು ಕಾನೂನುಬಾಹಿರ ಎಂದು ವಾದಿಸಿದ್ದರು. ಆದರೆ ಈ ವಾದವನ್ನು ನ್ಯಾಯಾಲಯ ಒಪ್ಪದೆ ಅರ್ಜಿಯನ್ನು ವಜಾಗೊಳಿಸಿತು.
ರೈತರ ಭೂಮಿ ಕಸಿದುಕೊಳ್ಳಲು ರಾಜ್ಯ ಸರ್ಕಾರ ಯತ್ನ: ಅರ್ಜಿದಾರರು
ನ್ಯಾಯಾಲಯದಲ್ಲಿ ವಿಚಾರಣೆಗೆ ಸ್ವತಃ ಹಾಜರಾದ ಅರ್ಜಿದಾರರು, ಪುನರ್ವಸತಿ ಯೋಜನೆ, ಸಾಮಾಜಿಕ-ಆರ್ಥಿಕ ಹಾಗೂ ಪರಿಸರ ಪರಿಣಾಮ ಮೌಲ್ಯಮಾಪನವನ್ನು ಪ್ರಕಟಿಸದೇ ಸರ್ಕಾರ ಭೂಸ್ವಾಧೀನ ಅಧಿಸೂಚನೆ ಹೊರಡಿಸಿದೆ ಎಂದು ವಾದಿಸಿದರು. ಕಳೆದ 500 ದಿನಗಳಿಂದ ರೈತರು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ರೈತರ ಭೂಮಿಯನ್ನು ಕಸಿದುಕೊಳ್ಳಲು ಯತ್ನಿಸುತ್ತಿದೆ. ಇದು ವೃತ್ತಿಯ ಹಕ್ಕಿಗೆ ಒತ್ತು ನೀಡುವ ಸಂವಿಧಾನದ ವಿಧಿ 14ಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಕಾನೂನು ಪ್ರಕ್ರಿಯೆಯಲ್ಲಿ ಯಾವುದೇ ಉಲ್ಲಂಘನೆ ನಡೆದಿದ್ದರೆ ಅದನ್ನು ಸಲ್ಲಿಸುವಂತೆ ಸೂಚಿಸಿತು. ನ್ಯಾಯಾಲಯವು ಕೇವಲ ಕಾನೂನು ಪ್ರಕ್ರಿಯೆಯ ಅನುಸರಣೆಯನ್ನಷ್ಟೇ ಪರಿಶೀಲಿಸುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.