

ಬೆಂಗಳೂರು: ಬೆಂಗಳೂರಿನ ತುಮಕೂರು–ಬೆಂಗಳೂರು ಸೇವಾ ರಸ್ತೆಯಲ್ಲಿನ ಫುಟ್‌ಪಾತ್ ಒತ್ತುವರಿ ತೆರವುಗೊಳಿಸುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕುರಿತು ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರ, ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)ಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಪ್ರತಿವಾದಿಗಳಿಗೆ ನೋಟಿಸ್ ನೀಡುವಂತೆ ಆದೇಶಿಸಿದೆ.
ಟಿ. ದಾಸರಹಳ್ಳಿ ಎನ್‌ಎಚ್-4 ನಾಗರಿಕರು ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ನಗರದ ಟಿ. ದಾಸರಹಳ್ಳಿಯಿಂದ ಜಾಲಹಳ್ಳಿ ಕ್ರಾಸ್‌ವರೆಗೆ ಇರುವ ತುಮಕೂರು–ಬೆಂಗಳೂರು ಸೇವಾ ರಸ್ತೆಯ ಫುಟ್‌ಪಾತ್‌ಗಳನ್ನು ಅನಧಿಕೃತ ಬೀದಿಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದೆ.
ಅರ್ಜಿಯಲ್ಲಿ, ಫುಟ್‌ಪಾತ್‌ಗಳು ಒತ್ತುವರಿಯಾಗಿರುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ವಾಹನ ದಟ್ಟಣೆಯೂ ಹೆಚ್ಚುತ್ತಿದೆ ಎಂದು ತಿಳಿಸಲಾಗಿದೆ.
ಅಲ್ಲದೆ, ಸೇವಾ ರಸ್ತೆಯ ಒಂದು ಭಾಗವನ್ನು ಬೀದಿಬದಿ ವ್ಯಾಪಾರಿಗಳು ಅತಿಕ್ರಮಿಸಿರುವ ಕಾರಣ ಶಾಲಾ ಬಸ್‌ಗಳು, ಆಂಬುಲೆನ್ಸ್‌ಗಳು ಹಾಗೂ ಇತರೆ ವಾಹನಗಳು ಟ್ರಾಫಿಕ್‌ನಲ್ಲಿ ಸಿಲುಕುತ್ತಿವೆ.
ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಪ್ರತಿದಿನ ಶಾಲೆ ಮತ್ತು ಕಚೇರಿಗಳಿಗೆ ಸಮಯಕ್ಕೆ ತಲುಪಲು ಪರದಾಡುವಂತಾಗಿದೆ ಎಂದು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
ಈ ಹಿನ್ನೆಲೆಯಲ್ಲಿ, ಮಾರ್ಚ್ 2ರಂದು ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ, ಫುಟ್‌ಪಾತ್ ಒತ್ತುವರಿ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.