

ನವದೆಹಲಿ: ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಯಾರನ್ನೆಲ್ಲಾ ಸೇರಿಸಿಕೊಳ್ಳಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತಿದ್ದು ಈ ಮಧ್ಯೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಮಾತು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಉಪಮುಖ್ಯಮಂತ್ರಿಯಾಗಲು ಬಯಸುತ್ತೀರಾ ಎಂದು ಕೇಳಿದ್ದಕ್ಕೆ ಇಲ್ಲ ಎಂದು ಉತ್ತರಿಸಿದ ಯತೀಂದ್ರ, ನಾನು ಯಾವುದೇ ನಿರ್ದಿಷ್ಟ ಖಾತೆಗಾಗಿ ಬೇಡಿಕೆ ಇಟ್ಟಿಲ್ಲ ಎಂದರು. ಕಳೆದ ಬಾರಿ ನಾನು ಹೈಕಮಾಂಡ್ ಭೇಟಿಯಾದಾಗ ರಾಹುಲ್ ಗಾಂಧಿ ಅವರು ನನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಮಾತು ಕೊಟ್ಟಿದ್ದರು. ಆದ್ದರಿಂದ ನಾನು ಆಶಾವಾದಿಯಾಗಿದ್ದೇನೆ. ಯಾವುದೇ ಖಾತೆ ಇರಲಿ, ನಾನು ಸಂತೋಷವಾಗಿರುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಳೆದ ಶನಿವಾರ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿಯಾಗಿರುವ ಶಿವಕುಮಾರ್, ಜೂನ್ 3ರಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಇಂದು ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಡಿಕೆ ಶಿವಕುಮಾರ್ ಜೊತೆ 10 ರಿಂದ 12 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
Advertisement