

ಬೆಂಗಳೂರು: ಬೆಂಗಳೂರನಲ್ಲಿ ಸಂಚಾರ ಸುರಕ್ಷತೆ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಮತ್ತು ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ತಿಳಿಸಿದರು.
ಬೆಂಗಳೂರು ಸಂಚಾರ ಪೊಲೀಸ್ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಬೆಂಗಳೂರಿನ ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡ ಸಚಿವರು,ಇಂದು ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಟ್ರಾಫಿಕ್ ನಿರ್ವಹಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಎಂದರು.
ಬೆಂಗಳೂರಿನಲ್ಲಿ ಜನಸಂಖ್ಯೆಯ ವಾರ್ಷಿಕ ಬೆಳವಣಿಗೆ ದರ 3.7% ರಷ್ಟಿದ್ದರೆ, ವಾಹನಸಂಖ್ಯೆಯ ಬೆಳವಣಿಗೆ ದರ 10%ರಷ್ಟಿದೆ, ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ತಿಳಿಸಿದರು.
ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಟ್ರಾಫಿಕ್ ಪೊಲೀಸ್ 53 ಪೊಲೀಸ್ ಠಾಣೆಯನ್ನು ಹೊಂದಿದೆದ್ದು, ಸುಮಾರು 1.25 ನೋಂದಾಯಿತ ವಾಹನಗಳಿರುವ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಪೊಲೀಸ್ ವ್ಯವಸ್ಥೆಯು ಸುಮಾರು 14,000 ಕಿಲೋಮೀಟರ್ ರಸ್ತೆ ಜಾಲದ ಟ್ರಾಫಿಕ್ ನಿರ್ವಹಿಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮಾಹಿತಿ ನೀಡಿದರು. ಸಂಚಾರ ಪೊಲೀಸ್ ವಸ್ತುಸಂಗ್ರಾಹಾಲಯ ವೀಕ್ಷಿಸಿದರಲ್ಲೆ, ಕ್ಯಾಮರಾ ಟ್ರ್ಯಾಕಿಂಗ್ ವಿಭಾಗಕ್ಕೆ ಭೇಟಿ ನೀಡಿ ಕಾರ್ಯಾಚರಣೆಯನ್ನು ವೀಕ್ಷಿಸಿದರು.
₹ 10 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಎಐ ಪ್ರಯೋಗಾಲಯ ಸ್ಥಾಪನೆ: ಈ ಮಧ್ಯೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಶೀಲತೆ ಹೆಚ್ಚಿಸಲು ರಾಜ್ಯದ 2 ಮತ್ತು 3ನೆ ಶ್ರೇಣಿಯ ನಗರ, ಪಟ್ಟಣಗಳ 50 ಸರ್ಕಾರಿ ಕಾಲೇಜಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (ಎಐ) ಪ್ರಯೋಗಾಲಯಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಇಲಾಖೆ ಸಚಿವರು ಆಗಿರುವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಪ್ರಸಕ್ತ ಹಣಕಾಸು ವರ್ಷದ (2026-27) ಬಜೆಟ್‌ನಲ್ಲಿ ಘೋಷಿಸಿದಂತೆ, ಗ್ರಾಮೀಣ ಪ್ರದೇಶದ ಯುವ ಜನರನ್ನು ಅಗತ್ಯ ಕೌಶಲದ ಜೊತೆ ಉದ್ಯೋಗಶೀಲರನ್ನಾಗಿ ಮಾಡಲು ಕೇಂದ್ರ ಸರ್ಕಾರದ ಎಐ ಮಿಷನ್ ಸಹಭಾಗಿತ್ವದಲ್ಲಿ ʼಎಐʼ ಪ್ರಯೋಗಾಲಯಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಆಯ್ಕೆ ಮಾಡಲಾಗುವ ಶಿಕ್ಷಣ ಸಂಸ್ಥೆ, ಕಾಲೇಜ್‌ಗಳಲ್ಲಿ ಆಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡ ಪ್ರಯೋಗಾಲಯಗಳನ್ನು ಸ್ಥಾಪಿಸಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ, ಕೌಶಲ ಅಭಿವೃದ್ಧಿ ಮತ್ತು ಹೊಸ ಆವಿಷ್ಕಾರಗಳಿಗೆ ಅವಕಾಶ ಕಲ್ಪಿಸಿಕೊಡಲಾಗುವುದು. ಯುವಜನರು ಇತ್ತೀಚಿನ ತಂತ್ರಜ್ಞಾನಗಳನ್ನು ಕರಗತ ಮಾಡಿಕೊಳ್ಳಲು ಮತ್ತು ಉದ್ಯೋಗಾರ್ಹತೆ ಹೆಚ್ಚಿಸಿಕೊಳ್ಳಲು ಇದು ಎಂದು ಸಚಿವರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಎಐ ಮಿಷನ್ - ಯೋಜನೆಯಡಿ ಪ್ರತಿಯೊಂದು ಪ್ರಯೋಗಾಲಯಕ್ಕೆ 3 ವರ್ಷಗಳ ಅವಧಿಗೆ ₹ 68.98 ಲಕ್ಷ ಮೊತ್ತದ ನೆರವು ನೀಡಲಿದೆ. ಈ ಮೊತ್ತವನ್ನು 3 ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದಕ್ಕೆ ಪೂರಕವಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವಂತೆ ₹ 10 ಕೋಟಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ, ಮೊದಲ ವರ್ಷಕ್ಕೆ ₹ 6.29 ಕೋಟಿ ಬಿಡುಗಡೆ ಮಾಡಲಾಗುತ್ತಿದೆ, ಮೊದಲ ಹಂತದಲ್ಲಿ ಕೃತಕ ಬುದ್ಧಿಮತ್ತೆ ದತ್ತಾಂಶ ಪ್ರಯೋಗಾಲಯಗಳನ್ನು ಸ್ಥಾಪಿಸಲು 23 ಶೈಕ್ಷಣಿಕ ಸಂಸ್ಥೆಗಳನ್ನು ಆಯ್ಕೆ ಮಾಡಿರುವುದಕ್ಕೂ ಸರ್ಕಾರದ ಅನುಮೋದನೆ ದೊರೆತಿದೆ ಎಂದೂ ಸಚಿವರು ವಿವರಿಸಿದ್ದಾರೆ.
Advertisement