ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ದುರುಪಯೋಗಕ್ಕೆ ಕಡಿವಾಣ; ಈವರೆಗೂ 15 ರೂ. ಕೋಟಿ ವಸೂಲಿ- ಎಚ್‌.ಎಂ. ರೇವಣ್ಣ

ಪರಿಶೀಲನೆ ವೇಳೆ ಹಲವು ಅಕ್ರಮಗಳು ಬೆಳಕಿಗೆ ಬಂದಿವೆ. ಮೃತಪಟ್ಟವರ ಖಾತೆಗಳಿಗೆ ಹಣ ಜಮೆಯಾಗಿರುವುದು, ಒಂದೇ ಬ್ಯಾಂಕ್ ಖಾತೆಗೆ 20ಕ್ಕೂ ಹೆಚ್ಚು ಫಲಾನುಭವಿಗಳನ್ನು ಜೋಡಿಸಿರುವುದು ಹಾಗೂ ಅಸ್ತಿತ್ವದಲ್ಲೇ ಇಲ್ಲದ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ.
HM revanna
ಎಚ್‌ಎಂ ರೇವಣ್ಣ
Updated on

ಕಲಬುರಗಿ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ. ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯಗಳು ಎಂದಿನಂತೆ ಮುಂದುವರಿಯಲಿದ್ದು, ದುರುಪಯೋಗ ತಡೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಮಂಗಳವಾರ ಕಲಬುರಗಿಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಪ್ಪಾಗಿ ವರ್ಗಾವಣೆಯಾಗಿದ್ದ ಹಣದಲ್ಲಿ ಈಗಾಗಲೇ ಸುಮಾರು ರೂ.14-15 ಕೋಟಿ ವಸೂಲಿ ಮಾಡಲಾಗಿದೆ. ಉಳಿದ ರೂ.100 ಕೋಟಿ ವಸೂಲಿಗೆ ಬ್ಯಾಂಕ್‌ಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದು ತಿಳಿಸಿದರು.

ಪರಿಶೀಲನೆ ವೇಳೆ ಹಲವು ಅಕ್ರಮಗಳು ಬೆಳಕಿಗೆ ಬಂದಿವೆ. ಮೃತಪಟ್ಟವರ ಖಾತೆಗಳಿಗೆ ಹಣ ಜಮೆಯಾಗಿರುವುದು, ಒಂದೇ ಬ್ಯಾಂಕ್ ಖಾತೆಗೆ 20ಕ್ಕೂ ಹೆಚ್ಚು ಫಲಾನುಭವಿಗಳನ್ನು ಜೋಡಿಸಿರುವುದು ಹಾಗೂ ಅಸ್ತಿತ್ವದಲ್ಲೇ ಇಲ್ಲದ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ 9,156 ಮೃತ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಅವರ ಖಾತೆಗಳಿಗೆ ರೂ.4.27 ಕೋಟಿ ಜಮೆಯಾಗಿತ್ತು. ಈ ಪೈಕಿ 5,336 ಖಾತೆಗಳಿಗೆ ಹಣ ವರ್ಗಾವಣೆ ಸ್ಥಗಿತಗೊಳಿಸಲಾಗಿದ್ದು, ಇದುವರೆಗೆ ರೂ.25.84 ಲಕ್ಷ ಮಾತ್ರ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

HM revanna
ಕರ್ನಾಟಕ ಬಜೆಟ್ 2026: 'ಗೃಹಲಕ್ಷ್ಮಿ'ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ; 28 ಸಾವಿರ ಕೋಟಿ ರೂ ಹಂಚಿಕೆ

ಇದೇ ವೇಳೆ ವಸೂಲಾತಿ ಪ್ರಗತಿ ನಿಧಾನವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ 8ರಿಂದ 10 ದಿನಗಳೊಳಗೆ ಮನೆ-ಮನೆ ಸಮೀಕ್ಷೆ ನಡೆಸಿ, ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲವು ಬ್ಯಾಂಕ್‌ಗಳು ಗ್ಯಾರಂಟಿ ಯೋಜನೆಗಳಡಿ ಜಮೆಯಾಗುವ ಹಣವನ್ನು ಹಳೆಯ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದು ಕಾನೂನುಬಾಹಿರವಾಗಿದ್ದು, ಇಂತಹ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಬ್ಯಾಂಕ್‌ಗಳಿಗೆ ಎಚ್ಚರಿಕೆ ನೀಡಿದರು.

ಅನ್ನಭಾಗ್ಯ ಯೋಜನೆ ಕುರಿತು ಮಾಹಿತಿ ನೀಡಿದ ಅವರು, ನಿಯಮ ಉಲ್ಲಂಘನೆಗಾಗಿ 14 ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ. 6,874 ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದ್ದು, 9,631 ಕ್ವಿಂಟಲ್ ಅಕ್ರಮ ಆಹಾರ ಧಾನ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಜುಲೈ 2023ರಿಂದ ಡಿಸೆಂಬರ್ 2024ರವರೆಗೆ ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ ರೂ.508.72 ಕೋಟಿ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದೆ. ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಸಂಸ್ಥೆಗಳಿಗೆ ಬಾಕಿ ಇದ್ದ ಮೊತ್ತದಲ್ಲಿ ಶೇ.80ರಷ್ಟು ಹಣ, ಅಂದರೆ ರೂ.608 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರಯಾಣಿಕರ ಬೇಡಿಕೆಯಂತೆ 124 ಹೊಸ ಬಸ್ ವೇಳಾಪಟ್ಟಿಗಳನ್ನೂ ಆರಂಭಿಸಲಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಸ್ಥಗಿತಗೊಳಿಸಲಿದೆ ಎಂಬ ವದಂತಿಗಳಿಗೆ ಪ್ರತಿಕ್ರಿಯಿಸಿ, "ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ಎಂದಿನಂತೆ ಮುಂದುವರಿಯಲಿವೆ. ಆದರೆ ಆದಾಯ ತೆರಿಗೆ ಪಾವತಿದಾರರು ಹಾಗೂ ಸುಳ್ಳು ಮಾಹಿತಿ ನೀಡಿ ಸೌಲಭ್ಯ ಪಡೆಯುತ್ತಿರುವವರನ್ನು ಗುರುತಿಸಿ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲಾಗುತ್ತಿದೆ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com