

ಬೆಂಗಳೂರು: ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾರನ್ನೂ, ಯಾವ ಪ್ರಯತ್ನವನ್ನೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಮದ್ಯ ಮಾರಾಟ ಹಾಗೂ ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಕೈಗೊಳ್ಳಬೇಕಿರುವ ಸುಧಾರಣಾ ಕ್ರಮಗಳ ಬಗ್ಗೆ ಅಗತ್ಯ ಸಲಹೆ- ಸೂಚನೆಗಳನ್ನು ನೀಡಿದರು.
ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾರನ್ನೂ, ಯಾವ ಪ್ರಯತ್ನವನ್ನೂ ನಾನು ಸಹಿಸುವುದಿಲ್ಲ. ಬಹಳ ಎಚ್ಚರಿಕೆಯಿಂದ ಕೆಲಸ ಮಾಡಿ ಎನ್ನುವ ಸ್ಪಷ್ಟ ಸೂಚನೆ ಕೊಟ್ಟರು.
ಅಬಕಾರಿ ಇಲಾಖೆಯ ಅಧಿಕಾರಿಗಳು ತಮ್ಮ ಘನತೆಯನ್ನು ಉಳಿಸಿಕೊಂಡು, ಸರ್ಕಾರದ ಘನತೆಯನ್ನು ಸಹ ಕಾಪಾಡುವ ರೀತಿಯಲ್ಲಿ ಕೆಲಸ ಮಾಡಬೇಕು. ಅಬಕಾರಿ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಲೇಬೇಕಾದ ಅಗತ್ಯಬಿದ್ದರೆ ವರ್ಗಾವಣೆ ಮಾಡಲು ಅಗತ್ಯವಾದ ಕಾನೂನು ಬದಲಾವಣೆಯನ್ನೂ ತರಲು ಚಿಂತಿಸಲಾಗುವುದು ಎಂದು ತಿಳಿಸಿದರು.
ಇಲಾಖೆಯಲ್ಲಿ ಹೊಸದಾಗಿ AIB ಪದ್ಧತಿ ಜಾರಿಯಾದ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಆಗಿದೆ. ಹೊಸದಾಗಿ 574 ಸನ್ನದುಗಳನ್ನು ಇ-ಹರಾಜು ಹಾಕಲು ನಿರ್ಧರಿಸಲಾಗಿದೆ.ಪರವಾನಗಿ ನವೀಕರಣ ಮೊತ್ತವನ್ನು ಎರಡು ಕಂತುಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಬೇಕು ಎಂದರು.
ಅಕ್ಕ ಪಕ್ಕದ ರಾಜ್ಯಗಳಲ್ಲಿ ಇಲಾಖೆ ಹೇಗೆ ನಡೆಯುತ್ತಿದೆ ಎನ್ನುವ ವರದಿ ಬಗ್ಗೆ ಅಧ್ಯಯನ ನಡೆಸಿದ್ದೇನೆ. ಇಲಾಖೆಗೆ ಕೊಟ್ಟಿರುವ ಗುರಿ ತಲುಪಲು ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.