

ಬೆಂಗಳೂರು: ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯನ್ನು ಬಳಸಿಕೊಂಡು ಬಿಜೆಪಿ ರಾಜ್ಯದ 97 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.
ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಕಾಂಗ್ರೆಸ್ ಬೂತ್ ಮಟ್ಟದ ಏಜೆಂಟರ (BLA) ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಜಯಪುರ ನಗರ ಹಾಗೂ ಬಬಲೇಶ್ವರ ಸೇರಿದಂತೆ ಒಟ್ಟು 97 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿಗರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿದರು.
ಇದೇ ರೀತಿಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಬಿಜೆಪಿ ಆಡಳಿತದ ಇತರ ರಾಜ್ಯಗಳಲ್ಲೂ ಅನುಸರಿಸಲಾಗಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಪರ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟರೆ ಭವಿಷ್ಯದಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವುದಷ್ಟೇ ಅಲ್ಲ, ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯುವುದಕ್ಕೂ ಸಮಸ್ಯೆಯಾಗುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳು, ಪಡಿತರ ವಿತರಣೆ ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ ಸೇರಿದಂತೆ ಹಲವು ಸರ್ಕಾರಿ ಸೇವೆಗಳ ಮೇಲೂ ಇದರ ಪರಿಣಾಮ ಬೀಳಬಹುದು ಎಂದು ಎಚ್ಚರಿಸಿದರು.
ಈ ವಿಚಾರವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಬೂತ್ ಮಟ್ಟದ ಏಜೆಂಟರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ನಿಗಾ ವಹಿಸಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಅವರು, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಕೇವಲ ವಿಧಾನಸಭೆ ಚುನಾವಣೆಗೆ ಮಾತ್ರ ಸೀಮಿತವಾಗಿರುವುದಿಲ್ಲ. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದರು.