

ಕೊಡಗು: ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಿದ್ದು, ಕಾಡಾನೆ ದಾಳಿಯಿಂದ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಬೆಟ್ಟತ್ತೂರು ಗ್ರಾಮದ ಪೂಜಾ ಮೃತ ದುರ್ದೈವಿ.
ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ, ನಿನ್ನೆ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಇದರಿಂದ ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.
ಈ ಘಟನೆಯಿಂದ ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಮದೆನಾಡು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಮೈಸೂರು - ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಜಮಾಯಿಸಿದ ಗ್ರಾಮಸ್ಥರು, ರೈತಪರ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಹೆದ್ದಾರಿಯನ್ನು ತಡೆದು ಅರಣ್ಯ ಅಧಿಕಾರಿಗಳು ಹಾಗೂ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.
ಪರಿಣಾಮ ಸುಮಾರು ಎರಡು ಗಂಟೆಗೂ ಹೆಚ್ಚುಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಕಿಲೋ ಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಪ್ರತಿಭಟನಾ ಸ್ಥಳದಲ್ಲಿದ್ದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಬಿಜೆಪಿ ಮುಖಂಡರು,ಅರಣ್ಯಾಕಾರಿಗಳು ಸ್ಥಳಕ್ಕಾಗಮಿಸದೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರಿಂದ ಪ್ರತಿಭಟನಾಕಾರರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆಯಿತು.
ಬಳಿಕ ಸ್ಥಳಕ್ಕಾಗಮಿಸಿದ ಜಿಲ್ಲಾಅರಣ್ಯ ಸಂರಕ್ಷಣಾಕಾರಿ ಸೋನಲ್ ವೃಶ್ನಿ ಬಿಗಿ ಪೊಲೀಸ್ ಬಂದೋಬಸ್ಥ್‌ನೊಂದಿಗೆ ಪ್ರತಿಭಟನಕಾರರ ಅಹವಾಲು ಆಲಿಸಿದರು. ಈ ಸಂದರ್ಭ ಪ್ರತಿಭಟನಾಕಾರರು ಆನೆ ಮಾನವ ಸಂಘರ್ಷಕ್ಕೆ ಕಾರಣವಾಗಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ಜನವಸತಿ ಪ್ರದೇಶದಲ್ಲಿ ಕಾಡಾನೆಗಳು ಬರದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಕೈಬಿಡಲಾಯಿತು.
Advertisement