News wrap 02-03-2026 | ಮಧ್ಯಪ್ರಾಚ್ಯದಲ್ಲಿ ಯುದ್ಧ: ಕನ್ನಡಿಗರ ರಕ್ಷಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ, ಸಹಾಯವಾಣಿ ಆರಂಭ; ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು

News wrap of the day
ಸುದ್ದಿ ಮುಖ್ಯಾಂಶಗಳು online desk

1. Iran-Israel war: ಸಹಾಯವಾಣಿ ಪ್ರಾರಂಭಿಸಿದ ರಾಜ್ಯ ಸರ್ಕಾರ

ಇರಾನ್ ಮೇಲೆ ಅಮೆರಿಕ- ಇಸ್ರೇಲ್ ಜಂಟಿ ದಾಳಿ ನಡೆಸುತ್ತಿದ್ದು, ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಅನೇಕ ದೇಶಗಳು ವಾಯುಪ್ರದೇಶವನ್ನು ಮುಚ್ಚಿರುವ ಹಿನ್ನೆಲೆ, ರಾಜ್ಯದ ಜನತೆಗೆ ನೆರವು ನೀಡಲು ಕರ್ನಾಟಕ ಸರ್ಕಾರ ರಾಜ್ಯ ಹಾಗೂ ಜಿಲ್ಲಾಮಟ್ಟದ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ಆರಂಭಿಸಿದೆ. ಈ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದ್ದು, ಮಧ್ಯಪ್ರಾಚ್ಯದ ಪ್ರಚಲಿತ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಹಲವಾರು ರಾಷ್ಟ್ರಗಳು ವೈಮಾನಿಕ ಸಂಚಾರ ಬಂದ್ ಘೋಷಿಸಿವೆ. ವಿಮಾನ ಪ್ರಯಾಣದ ವ್ಯತ್ಯಯದಿಂದಾಗಿ ಕರ್ನಾಟಕ ಸೇರಿದಂತೆ ವಿವಿಧ ದೇಶಗಳ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಯುದ್ಧ ಪೀಡಿತ ಮಧ್ಯಪ್ರಾಚ್ಯ ದೇಶಗಳಲ್ಲಿ, ಸಿಲುಕಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕರ್ನಾಟಕದ ನಿವಾಸಿಗಳಿಗೆ ನೆರವಾಗಲು ಸಹಾಯವಾಣಿ ಸಂಖ್ಯೆಗಳನ್ನು ಪ್ರಾರಂಭಿಸಿದೆ ಎಂದು ತಿಳಿಸಿದ್ದಾರೆ. ಇಸ್ರೇಲ್–ಇರಾನ್ ಉದ್ವಿಗ್ನತೆಯ ಹಿನ್ನೆಲೆ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಶಾಸಕ ಭರತ್ ರೆಡ್ಡಿ ಸೇರಿ ಬಳ್ಳಾರಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆಂದು ತಿಳಿದುಬಂದಿದೆ.

2. ಮಧ್ಯಪ್ರಾಚ್ಯದಲ್ಲಿ ಯುದ್ಧ: ಕನ್ನಡಿಗರ ರಕ್ಷಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಮಧ್ಯಪ್ರಾಚ್ಯದ ದೇಶಗಳಲ್ಲಿ ಯುದ್ಧ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಮಧ್ಯಪ್ರಾಚ್ಯ ಭಾಗದಲ್ಲಿ ನೆಲೆಸಿರುವ ಕನ್ನಡಿಗರು ಮತ್ತು ಭಾರತೀಯರ ಬಗ್ಗೆ ಸಿಎಂ ಆತಂಕ ವ್ಯಕ್ತಪಡಿಸಿದ್ದು, ಅನೇಕ ದೇಶಗಳು ತಮ್ಮ ವಾಯುಮಾರ್ಗವನ್ನು ಬಂದ್ ಮಾಡಿರುವುದರಿಂದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ದುಬೈನಂತಹ ಪ್ರಮುಖ ಸ್ಥಳಗಳಲ್ಲಿ ಸಾವಿರಾರು ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಅವರ ರಕ್ಷಣೆಗೆ ಕೂಡಲೇ ಮುಂದಾಗಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ. ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿಯ ಹಿನ್ನೆಲೆ ವಾಯುಪ್ರದೇಶ ನಿರ್ಬಂಧ ಜಾರಿಯಾದ ಪರಿಣಾಮ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 40 ವಿಮಾನಗಳ ಸಂಚಾರ ರದ್ದುಗೊಂಡಿದ್ದು, ಪರಿಣಾಮ ಪ್ರಯಾಣಿಕರು ಸಂಕಷ್ಟಕ್ಕೊಳಗಾಗಿದ್ದಾರೆ.

3. 'ಶ್ರೀಮಂತರು ಗ್ಯಾರಂಟಿ ಯೋಜನೆ ಬಿಡಲಿ- ಎಂ.ಬಿ ಪಾಟೀಲ್ ಕರೆ

ಗ್ಯಾರಂಟಿ ಯೋಜನೆಗಳನ್ನು ಶ್ರೀಮಂತರು ಸ್ವಯಂ ಪ್ರೇರಿತರಾಗಿ ಕೈ ಬಿಡಬೇಕು ಎಂದು ಸಚಿವ ಎಂಬಿ ಪಾಟೀಲ್ ಮನವಿ ಮಾಡಿದ್ದಾರೆ. ವಿಜಯಪುರದ ಆಲಮಟ್ಟಿಯಲ್ಲಿ ಮಾತನಾಡಿದ ಸಚಿವರು, ಗ್ಯಾರಂಟಿಗಳು ಬಡವರ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ಯೋಜನೆಗಳಾಗಿವೆ. ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯ ಒಂದು ಭಾಗ. ಬಡವರ ಆರ್ಥಿಕ ಸಬಲೀಕರಣಕ್ಕೆ ಇದು ಅಗತ್ಯವಾಗಿದ್ದು, ಅರ್ಹರು ಮಾತ್ರ ಇದರ ಪ್ರಯೋಜನ ಪಡೆಯಬೇಕು. ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿದೆ. ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುವುದಿಲ್ಲ ಎಂದು ಹೇಳಿದರು.

4. ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು

ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಿದ್ದು, ಕಾಡಾನೆ ದಾಳಿಯಿಂದ ಬೆಟ್ಟತ್ತೂರು ಗ್ರಾಮದ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಪೂಜಾ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೇ ಆಕೆ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಮದೆನಾಡು ಗ್ರಾಮದಲ್ಲಿ ಮೈಸೂರು - ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಜಮಾಯಿಸಿದ ಗ್ರಾಮಸ್ಥರು, ರೈತಪರ ಸಂಘಟನೆಗಳು ಹೆದ್ದಾರಿಯನ್ನು ತಡೆದು ಅರಣ್ಯ ಅಧಿಕಾರಿಗಳು ಹಾಗೂ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು. ಬಳಿಕ ಸ್ಥಳಕ್ಕಾಗಮಿಸಿದ ಜಿಲ್ಲಾಅರಣ್ಯ ಸಂರಕ್ಷಣಾಕಾರಿ ಸೋನಲ್‌ ವೃಶ್ನಿ ಬಿಗಿ ಪೊಲೀಸ್‌ ಬಂದೋಬಸ್ಥ್‌ನೊಂದಿಗೆ ಪ್ರತಿಭಟನಕಾರರ ಅಹವಾಲು ಆಲಿಸಿದರು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಕೈಬಿಡಲಾಯಿತು.

5. ಟಿ ನರಸೀಪುರದ ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಎಚ್‌ಸಿ ಮಹದೇವಪ್ಪ

ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿರುವ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್‌ಸಿ ಮಹಾದೇವಪ್ಪ ಸ್ಪಷ್ಟಪಡಿಸಿದ್ದು, ಈ ಬಗ್ಗೆ ಬಿಜೆಪಿ "ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ" ಎಂದು ಆರೋಪಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಮಹದೇವಪ್ಪ, ರೇಷ್ಮೆ ಮಾರುಕಟ್ಟೆಗೆ ಬಳಸಲಾಗುತ್ತಿದ್ದ ಒಂದೂವರೆ ಎಕರೆ ಭೂಮಿಯನ್ನು ಉದ್ಯಾನವನದ ಅಭಿವೃದ್ಧಿಗಾಗಿ ಹಂಚಿಕೆ ಮಾಡಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. ಆದರೆ ಈಗ ಆ ಆದೇಶವನ್ನು ಪರಿಶೀಲಿಸಲಾಗುತ್ತಿದೆ. ನಮಗೆ ರೇಷ್ಮೆ ಕಾರ್ಖಾನೆ ಪ್ರಮುಖ ಆದ್ಯತೆಯಾಗಿದೆ. ಹೀಗಾಗಿ ಕಾರ್ಮಿಕರು ಮತ್ತು ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com