

ಬೆಂಗಳೂರು: ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ತಲಾ 60 ಕೋಟಿ ರೂ. ವೆಚ್ಚದಲ್ಲಿ 10 GTTC ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಒಟ್ಟಾರೆ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
6 ರಿಂದ 12ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ 2025-26ನೇ ಸಾಲಿನಲ್ಲಿ 42 ಶ್ರಮಿಕ ವಸತಿ ಶಾಲೆಗಳನ್ನು ಅನುಮೋದಿಸಲಾಗಿದೆ. 2026-27ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 62 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಎಲ್ಲಾ 104 ಶಾಲೆಗಳನ್ನು ಬಾಡಿಗೆ ಕಟ್ಟಡಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರು ಹಾಗೂ ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತಿ ಕೌಶಲ್ಯ ತರಬೇತಿಯನ್ನು ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಅತ್ಯಾಧುನಿಕ ಮೂಲಸೌಕರ್ಯವನ್ನು ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದರು.
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಕೌಶಲ್ಯಾಧಾರಿತ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಆನ್‌ಲೈನ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸುವ 'ಕಾಯಕ ಭಾಗ್ಯ' ಎಂಬ ಯೋಜನೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಕಾರ್ಮಿಕ ರಾಜ್ಯ ವಿಮಾ ಸೊಸೈಟಿಯ ರಚನೆಯಿಂದಾಗಿ ಪ್ರಸ್ತುತ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳನ್ನು 50 ಲಕ್ಷ ವಿಮಾದಾರರಿಗೆ ಹಾಗೂ 150 ಲಕ್ಷ ಅವಲಂಬಿತರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಒದಗಿಸಲಾಗುವುದು. ಹುಬ್ಬಳ್ಳಿ, ಇಂದಿರಾನಗರ, ಮೈಸೂರು ಮತ್ತು ದೊಡ್ಡಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಹಾಗೂ ಇಂದಿರಾನಗರದಲ್ಲಿ ಮೂರು ವರ್ಷದ PG (DNB) ಕೋರ್ಸ್ ಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
Advertisement