

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳು ನಡೆಸುತ್ತಿರುವ ಆಸ್ಪತ್ರೆಗಳು, ಶಾಲೆಗಳು ಮತ್ತು ಕಾಲೇಜುಗಳನ್ನು ಆರೋಗ್ಯ ಹಾಗೂ ಶಿಕ್ಷಣ ಇಲಾಖೆಗಳ ವ್ಯಾಪ್ತಿಗೆ ತರಲು ಸರ್ಕಾರ ಚಿಂತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಜಿಬಿಎ ವ್ಯಾಪ್ತಿಯ ಶಾಲೆಗಳು ಕಳಪೆ ಶಿಕ್ಷಣ, ಅಪೂರ್ಣ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಮತ್ತು ವೇತನ ವಿಳಂಬ ಸಮಸ್ಯೆಗಳಿಂದ ಬಳಲುತ್ತಿವೆ. ಆಸ್ಪತ್ರೆಗಳಲ್ಲೂ ದುರ್ಬಲ ನಿರ್ವಹಣೆ, ವೈದ್ಯಕೀಯ ಉಪಕರಣಗಳ ಕೊರತೆ ಮತ್ತು ಮೂಲಸೌಕರ್ಯ ಸಮಸ್ಯೆಗಳು ಕಂಡುಬರುತ್ತಿವೆ.
ಈ ಸಂಸ್ಥೆಗಳನ್ನು ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳ ಅಧೀನಕ್ಕೆ ತಂದರೆ ಆಡಳಿತ ಸುಧಾರಣೆ, ಪರಿಣಾಮಕಾರಿ ನಿರ್ವಹಣೆ ಹಾಗೂ ಉತ್ತಮ ಸೇವೆ ಒದಗಿಸಲು ಸಾಧ್ಯವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಶಿಕ್ಷಣ ಸಚಿವ ಮಧುಬಂಗಾರಪ್ಪ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಜಿಬಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಜೊತೆಗೆ 242 ನಮ್ಮ ಕ್ಲಿನಿಕ್‌ಗಳು, 143 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಎರಡು ಸಾಮಾನ್ಯ ಆಸ್ಪತ್ರೆಗಳು, ಆರು ರೆಫರಲ್ ಆಸ್ಪತ್ರೆಗಳು ಹಾಗೂ 27 ಹೆರಿಗೆ ಆಸ್ಪತ್ರೆಗಳ ಜವಾಬ್ದಾರಿಯೂ ಇದೆ.
ಈ ಸಂಸ್ಥೆಗಳು ಸರ್ಕಾರದ ಇಲಾಖೆಗಳ ಅಧೀನಕ್ಕೆ ಹೋದರೆ ಪಾಲಿಕೆಗಳಿಗೆ ಕೋಟ್ಯಂತರ ರೂಪಾಯಿ ಉಳಿತಾಯವಾಗಲಿದ್ದು, ನಗರಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಸರ್ಕಾರದ ಇಲಾಖೆಗಳು ಉತ್ತಮವಾಗಿ ನಿರ್ವಹಿಸಬಹುದು ಎಂದು ಸರ್ಕಾರ ಭಾವಿಸಿದರೆ, ಅವುಗಳನ್ನು ಹಸ್ತಾಂತರಿಸಲು ನಾವು ಸಿದ್ಧ,” ಎಂದು ಜಿಬಿಎ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮಂತ್ರಿಗಳ ಅನುಮೋದನೆಯ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement