

ಬೆಂಗಳೂರು: ಸಚಿವ ಸುಧಾಕರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆಂದು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು.
ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ನನ್ನ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.
ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಜನಪರ ಕಾಳಜಿಯುಳ್ಳ ನಾಯಕರಾಗಿದ್ದರು. ಬಡವರ ಬಂಧು ಎಂದೇ ಹೆಸರಾಗಿದ್ದ ಅವರು, ನನ್ನನ್ನು ಭೇಟಿ ಮಾಡಲು ಬಂದಾಗಲೆಲ್ಲ ಕ್ಷೇತ್ರದ ಒಂದಿಲ್ಲೊಂದು ಅಭಿವೃದ್ಧಿ ಕೆಲಸದ ಬಗ್ಗೆ ಮನವಿ ಹಿಡಿದುಕೊಂಡೇ ಬರುತ್ತಿದ್ದರು. ಅವರ ಆ ಗುಣ, ಕ್ಷೇತ್ರದ ಜನರ ಮೇಲಿದ್ದ ಅವರ ಅಪಾರ ಪ್ರೀತಿಯನ್ನು ತೋರಿಸುತ್ತಿತ್ತು.
ಸುಧಾಕರ್ ಅವರು ಇಂದು ಕುಟುಂಬಸ್ಥರು, ಬಂಧುಗಳು ಹಾಗೂ ಅಪಾರ ಬೆಂಬಲಿಗರನ್ನು ಅಗಲಿರುವುದು ತುಂಬಲಾರದ ನಷ್ಟ. ಭಗವಂತನು ಡಿ. ಸುಧಾಕರ್ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
ಸಂಸದೆ ಮಲ್ಲಿಕಾರ್ಜುನ ಪ್ರಭಾಕರ್ ಅವರು ಪ್ರತಿಕ್ರಿಯೆ ನೀಡಿ, ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಸಚಿವ ಮಹದೇವಪ್ಪ ಅವರು ಪ್ರತಿಕ್ರಿಯೆ ನೀಡಿ, ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪ್ರತಿಕ್ರಿಯಿಸಿ, ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರು ಮತ್ತು ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ. ಸುಧಾಕರ್ ಅವರ ನಿಧನಕ್ಕೆ ನನ್ನ ಸಂತಾಪಗಳು. ಭಗವಂತನ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರಿಗೆ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆಯವರು ಪ್ರತಿಕ್ರಿಯಿಸಿ, ಆತ್ಮೀಯರು, ಹಿರಿಯೂರಿನ ಶಾಸಕರು ಹಾಗೂ ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯೆಕ ಸಚಿವರಾಗಿದ್ದ ಸಂಪುಟ ಸಹದ್ಯೋಗಿ ಡಿ. ಸುಧಾಕರ್ ಅವರು ಅಗಲಿದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಹೇಳಿದ್ದಾರೆ.
ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಅವರು ಗುಣಮುಖರಾಗುವ ವಿಶ್ವಾಸವಿತ್ತು, ಆದರೆ ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ಸುಧಾಕರ್ ರವರು ಜನಾನುರಾಗಿಯಾಗಿ ಹೆಸರು ಮಾಡಿದ್ದಂತಹವರು, ಅವರಿಂದ ಇನ್ನಷ್ಟು ಜನಪರ ಕೆಲಸಗಳು ಆಗಬೇಕಾಗಿದ್ದವು, ಆದರೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ಆಘಾತಕಾರಿಯಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆಂದು ತಿಳಿಸಿದ್ದಾರೆ.
ಸಚಿವ ಎಂಬಿ.ಪಾಟೀಲ್ ಅವರು ಪ್ರತಿಕ್ರಿಯಿಸಿ, ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು, ಆತ್ಮೀಯರೂ ಆದ ಡಿ. ಸುಧಾಕರ್ ಅವರ ನಿಧನದ ಸುದ್ದಿ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ.
ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಜನಸೇವೆಯನ್ನು ಧ್ಯೇಯವಾಗಿಸಿಕೊಂಡು ಸರಳತೆ, ಸೌಜನ್ಯ ಹಾಗೂ ಕಾಳಜಿಯಿಂದ ಜನರ ಮನ ಗೆದ್ದಿದ್ದರು. ಸಾರ್ವಜನಿಕ ಬದುಕಿನಲ್ಲಿ ತಮ್ಮದೇ ಆದ ಸೇವಾ ಮನೋಭಾವದಿಂದ ಸದಾ ಸ್ಮರಣೀಯರಾಗಿರುತ್ತಾರೆ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಅಪಾರ ನಷ್ಟ ಉಂಟಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ, ಬಂಧು-ಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರತಿಕ್ರಿಯಿಸಿ, ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾದ ಶ್ರೀ ಡಿ.ಸುಧಾಕರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ ಹಾಗೂ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಈ ಅಗಾಧ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
Advertisement